×
Ad

ಕಲಬುರಗಿ: ಮಳೆಯಲ್ಲೂ ಪ್ರವಾಹಪೀಡಿತ ಗ್ರಾಮಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ, ಪರಿಶೀಲನೆ

Update: 2025-09-27 10:04 IST

ಕಲಬುರಗಿ: ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇಂತಹ ಸನ್ನಿವೇಶದಲ್ಲಿ ಪ್ರವಾಹ ಪೀಡಿತ ಚಿತ್ತಾಪುರ ತಾಲೂಕಿನ ಹಳೆ ಹೆಬ್ಬಾಳ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಈ ಸಂದರ್ಭದಲ್ಲಿ ಅವರು ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಸಚಿವರ ಮುಂದೆ ಬೇಡಿಕೆ ಇರಿಸಿದರು. ಗ್ರಾಮಸ್ಥರಿಗೆ ಸ್ಪಂದಿಸಿದ ಸಚಿವರು ಮಳೆ ತುಸು ಕಡಿಮೆಯಾದ ನಂತರ ಗ್ರಾಮಕ್ಕೆ ಭೇಟಿ ನೀಡಿ ಬೇಡಿಕೆ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.

ಗ್ರಾಮದ ಸ್ಥಳಾಂತರಕ್ಕೆ ತಾವು ಮುಂದಾಗಿರುವುದಾಗಿ ಹೇಳಿದ ಸಚಿವರು ಎಷ್ಟು ಕುಟುಂಬಗಳು ಸ್ಥಳಾಂತರಗೊಳ್ಳಬೇಕು ಎನ್ನುವ ಬಗ್ಗೆ ತೀರ್ಮಾನಿಸುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದರು.

ಈ ನಡುವೆ ಗ್ರಾಮಸ್ಥರೊಂದಿಗೆ ಗ್ರಾಮಸಭೆ ನಡೆಸುವಂತೆ ಸ್ಥಳದಲ್ಲಿದ್ದ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಎಸಿ ಸಾಹಿತ್ಯ ಅವರಿಗೆ ಸೂಚಿಸಿದರು.

ಗ್ರಾಮಸ್ಥರಿಗೆ ಬೇಕಾಗುವ ಸೌಲಭ್ಯ ಒದಗಿಸುವಂತೆ ಕಾಳಗಿ ತಹಸೀಲ್ದಾರಗೆ ಸೂಚಿಸಿದರು.

ನಿರಂತರ ಮಳೆಯಿಂದ ಬೆಣ್ಣೆತೊರ ಜಲಾಶಯದಿಂದ ನೀರು ಹರಿಬಿಟ್ಟಿದ್ದರಿಂದ ಹಳೆ ಹೆಬ್ಬಾಳ ಗ್ರಾಮಕ್ಕೆ ನೀರು ನುಗ್ಗಿದ್ದರಿಂದ ಗ್ರಾಮಸ್ಥರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಊಟ ವಸತಿ ವ್ಯವಸ್ಥೆ ಕಲ್ಪಿಸಲಾಗಿತ್ತು.

 

 

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News