ಕಬ್ಬಿಗೆ 5,500ರೂ. ಬೆಂಬಲ ಬೆಲೆ ನೀಡುವಂತೆ ರೈತ ಸಂಘಟನೆಗಳಿಂದ ಅಫಜಲಪುರ ಬಂದ್
ಕಲಬುರಗಿ: ಕಬ್ಬಿಗೆ ಪ್ರತಿ ಟನ್ಗೆ 5,500 ನ್ಯಾಯಸಮ್ಮತ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಅಫಜಲಪುರ ಪಟ್ಟಣದಲ್ಲಿ ಮುಂಜಾನೆ 9ಗಂಟೆಗೆ ಬಂದ್ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಜನಜೀವನ ಬಹುತೇಕ ಸ್ಥಗಿತಗೊಂಡಿದೆ. ರೈತ ಸಂಘಟನೆಗಳ ಬಂದ್ ಕರೆಗೆ ಪಟ್ಟಣದ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಸ್ಪಂದಿಸಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು.
ಅಫಜಲಪುರ ಪಟ್ಟಣದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದರೆ, ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿತ್ತು.
ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡಬೇಕು, 8.5 ರಿಕವರಿ ಆಧಾರದ ಮೇಲೆ ಬೆಲೆ ನಿಗದಿಪಡಿಸಬೇಕು ಹಾಗೂ ರಾಜ್ಯ ಸರಕಾರ ರೈತರ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ರೈತ ಸಂಘಟನೆಗಳ ಮುಖಂಡರು ಸರಕಾರ ಶೀಘ್ರವೇ ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.