Afzalpur | ಕಳಪೆ ಚರಂಡಿ ಕಾಮಗಾರಿ ಆರೋಪ : ಸಾರ್ವಜನಿಕರ ಆಕ್ರೋಶ
ಅಫಜಲಪುರ: ಪಟ್ಟಣದಲ್ಲಿ ನಡೆಯುತ್ತಿರುವ ಚರಂಡಿ ಕಾಮಗಾರಿಯ ಗುಣಮಟ್ಟದ ಕುರಿತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಚರಂಡಿ ಮುಚ್ಚಳ ಕುಸಿದು ಅಪಾಯಕಾರಿಯಾದ ಗುಂಡಿ ನಿರ್ಮಾಣವಾಗಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ವಿಶೇಷವಾಗಿ ರಾತ್ರಿ ವೇಳೆ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಅಪಘಾತದ ಭೀತಿಯಲ್ಲಿ ಓಡಾಡುವಂತಾಗಿದ್ದು, ಮಳೆ ನೀರು ಗುಂಡಿಯಲ್ಲಿ ಸಂಗ್ರಹವಾದರೆ ಅಪಾಯ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಶ್ರೀ ಸಿದ್ದರಾಮೇಶ್ವರ ನಾಟಕ ಸಂಘದ ಅಧ್ಯಕ್ಷ ಚಂದು ಬನ್ನಟ್ಟಿ, ಪಟ್ಟಣದಲ್ಲಿ ನಡೆಯುತ್ತಿರುವ ಕಳಪೆ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.
“ಚರಂಡಿ ಮತ್ತು ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಆದರೆ ಈಗಾಗಲೇ ಚರಂಡಿಯ ಮುಚ್ಚಳ ಕುಸಿದು, ಕಾಂಕ್ರೀಟ್ ಒಡೆದು ಕಬ್ಬಿಣದ ಸರಳುಗಳು ಹೊರಗೆ ಕಾಣಿಸುತ್ತಿವೆ. ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಈ ಸ್ಥಿತಿ ನಿರ್ಮಾಣವಾಗಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಗಂಭೀರ ಅನುಮಾನ ಮೂಡಿಸಿದೆ,” ಎಂದು ಅವರು ಹೇಳಿದರು.
ಸಾರ್ವಜನಿಕರ ಸುರಕ್ಷತೆಯನ್ನು ಕಡೆಗಣಿಸಿ ನಡೆಸುತ್ತಿರುವ ಇಂತಹ ಕಾಮಗಾರಿಯನ್ನು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಪರಿಶೀಲಿಸಿ, ಕುಸಿದಿರುವ ಚರಂಡಿಯನ್ನು ದುರಸ್ತಿಗೊಳಿಸಬೇಕು. ಜೊತೆಗೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಕೂಡಲೇ ಸಮಸ್ಯೆ ಪರಿಹರಿಸದಿದ್ದರೆ ಸಂಭವಿಸಬಹುದಾದ ಅನಾಹುತಗಳಿಗೆ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಇಲಾಖೆಯೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಚಂದು ಬನ್ನಟ್ಟಿ ಎಚ್ಚರಿಕೆ ನೀಡಿದ್ದಾರೆ.