ಕಲಬುರಗಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಬಡ ಕುಟುಂಬವೊಂದರ ಮನೆ ಸಂಪೂರ್ಣ ಭಸ್ಮವಾಗಿದ್ದು, ಮನೆಯಲ್ಲಿದ್ದ ಚಿನ್ನ, ನಗದು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ತಾಲೂಕಿನ ದಿಕ್ಸಂಗ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಖಾದರ್ ಸಾಬ್ ಅವರಿಗೆ ಸೇರಿದ ಮನೆಯಲ್ಲಿ ಈ  ಘಟನೆ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಇಡೀ ಮನೆ ಆವರಿಸಿತು. ಪರಿಣಾಮವಾಗಿ ಮನೆಯಲ್ಲಿದ್ದ ಸುಮಾರು 7 ಗ್ರಾಂ ಚಿನ್ನ, ಜಾನುವಾರು ಮಾರಾಟದಿಂದ ಸಂಗ್ರಹಿಸಿದ್ದ 1.50 ಲಕ್ಷ ರೂ. ನಗದು, ಎರಡು ಚೀಲ ಜೋಳ, ಎರಡು ಚೀಲ ಗೋಧಿ, ಬಟ್ಟೆ-ಬರೆ, ಪಾತ್ರೆಗಳು ಹಾಗೂ ಇತರೆ ಗೃಹೋಪಯೋಗಿ ವಸ್ತುಗಳೆಲ್ಲ ಬೆಂಕಿಗೆ ಆಹುತಿಯಾಗಿವೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಈ ಅಗ್ನಿ ಅವಘಡ ಭಾರೀ ಆಘಾತ ಉಂಟುಮಾಡಿದ್ದು, ಜೀವನೋಪಾಯಕ್ಕೆ ಆಧಾರವಾಗಿದ್ದ ಎಲ್ಲ ವಸ್ತುಗಳನ್ನು ಕಳೆದುಕೊಂಡು ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ.

ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಸಮಗ್ರ ಪರಿಶೀಲನೆ ನಡೆಸಿ, ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಧನ ಮಂಜೂರು ಮಾಡಬೇಕು ಹಾಗೂ ಸಂತ್ರಸ್ತ ಕುಟುಂಬಕ್ಕೆ ಹೊಸ ಮನೆ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor