Afzalpur | 48 ಸಾವಿರ ರೂ. ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಶ
ಅಫಜಲಪುರ: ಸರ್ಕಾರದ ಪಡಿತರ ಯೋಜನೆಯಡಿ ವಿತರಿಸಲಾದ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 48,250 ರೂ. ಮೌಲ್ಯದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಅಫಜಲಪುರ ತಾಲೂಕಿನ ದೇವಲ ಗಾಣಗಾಪುರ–ಚವಡಾಪುರ ಮಾರ್ಗವಾಗಿ ಮಹಾರಾಷ್ಟ್ರದ ಧೂದನಿ ಕಡೆಗೆ ಅಕ್ರಮವಾಗಿ ಅಕ್ಕಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಸಂಜೀವಕುಮಾರ ದಾಸ ಅವರ ನಿರ್ದೇಶನದಂತೆ ಆಹಾರ ನಿರೀಕ್ಷಕ ಮಹ್ಮದ್ ಶೋಹೇಬ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ದೇವಲ ಗಾಣಗಾಪುರ–ಚವಡಾಪುರ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಹೊಸ ರಾಜ್ಯ ಹೆದ್ದಾರಿಯಲ್ಲಿ ಕ್ರೂಜರ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದಲ್ಲಿ 34.30 ಕ್ವಿಂಟಲ್ ಪಡಿತರ ಅಕ್ಕಿ ಪತ್ತೆಯಾಯಿತು. ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ 48,250 ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಹೇರೂರ (ಬಿ) ಗ್ರಾಮದ ಹುಲಕಂಠರಾಯ ಸಾಲೂಂಕೆ ವಿರುದ್ಧ ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಆನಂದ ಸ್ವಾಮಿ, ಅಣ್ಣಪ್ಪ ಹಾಗೂ ನಿಂಗಪ್ಪ ಭಾಗವಹಿಸಿದ್ದರು.