×
Ad

Afzalpur | ಭೀಮಾ ನದಿಗೆ ನೀರು ಹರಿಸಲು ಒತ್ತಾಯಿಸಿ ಜು.8ರಂದು ಬೃಹತ್ ಪ್ರತಿಭಟನೆ

Update: 2026-07-06 19:55 IST

ಅಫಜಲಪುರ: ಜೂನ್ ತಿಂಗಳಲ್ಲಿ ವಾಡಿಕೆಯಷ್ಟು ಮಳೆಯಾಗದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರನ್ನು ತಕ್ಷಣ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ ಎಚ್ಚರಿಕೆ ನೀಡಿದೆ.

ಪಟ್ಟಣದ ಶ್ರೀಗುರು ಮಳೇಂದ್ರ ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಉಪಾಧ್ಯಕ್ಷ ಸಿದ್ದರಾಮ ದಣ್ಣೂರ, ಕಲಬುರಗಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಅಫಜಲಪುರ ತಾಲೂಕಿನ ಜೀವನಾಡಿಯಾಗಿರುವ ಭೀಮಾ ನದಿ ಸಂಪೂರ್ಣ ಬತ್ತಿದ್ದು, ರೈತರು, ಕೃಷಿ ಕಾರ್ಮಿಕರು ಹಾಗೂ ಜಾನುವಾರುಗಳು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು.

ಮಹಾರಾಷ್ಟ್ರ ಹಾಗೂ ಕರ್ನಾಟಕ ಸರ್ಕಾರಗಳು ಜಂಟಿ ಸಭೆ ನಡೆಸಿ ಉಜನಿ ಜಲಾಶಯದಿಂದ ರಾಜ್ಯದ ಪಾಲಿನ 15 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೆ ರೈತ ಸಂಘದ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಭೀಮಾ ನದಿಗೆ ನೀರು ಹರಿಸುವಂತೆ ಹಲವು ಬಾರಿ ಶಾಸಕ ಎಂ.ವೈ. ಪಾಟೀಲ ಹಾಗೂ ತಹಶೀಲ್ದಾರ್ ಅವರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ರೈತ ಮುಖಂಡ ಅಶೋಕ ಗುಡ್ಡೇವಾಡಿ ಮಾತನಾಡಿ, ಮಳೆ ಕೊರತೆಯಿಂದ ಮುಂಗಾರು ಬಿತ್ತನೆ ಕುಂಠಿತಗೊಂಡಿದ್ದು, ಹೆಸರು, ಉದ್ದು, ಸೋಯಾಬೀನ್ ಸೇರಿದಂತೆ ವಿವಿಧ ಬೆಳೆಗಳು ಒಣಗುತ್ತಿವೆ. ಭೀಮಾ ನದಿಯ ನೀರನ್ನು ಅವಲಂಬಿಸಿರುವ ಕಬ್ಬು ಬೆಳೆ ಕೂಡ ಒಣಗುವ ಹಂತಕ್ಕೆ ತಲುಪಿದ್ದು, ಸಾವಿರಾರು ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದರು.

ಹಿರಿಯ ರೈತ ಮುಖಂಡ ಬಸವರಾಜ ಚಾಂದಕವಟೆ ಮಾತನಾಡಿ, ದೇವಲಗಾಣಗಾಪುರಕ್ಕೆ ಆಗಮಿಸುವ ಸಾವಿರಾರು ಭಕ್ತರಿಗೆ ಭೀಮಾ ನದಿಯಲ್ಲಿ ನೀರಿಲ್ಲದ ಕಾರಣ ತೊಂದರೆಯಾಗುತ್ತಿದೆ. ನಾರಾಯಣಪುರ ಅಥವಾ ಉಜನಿ ಜಲಾಶಯದಿಂದ ನೀರು ಹರಿಸಿ, ದೇವಲಗಾಣಗಾಪುರದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ಖಂಡಿಸಿ ಜುಲೈ 8ರಂದು ಅಫಜಲಪುರದ ಬಸವೇಶ್ವರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿವಿಧ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಮುಖಂಡರು ಎಚ್ಚರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News