Afzalpur | 2028ರಲ್ಲಿ ಪ್ರಿಯಾಂಕ್ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗಲಿ: ಅರುಣಕುಮಾರ ಪಾಟೀಲ್
ಅಫಜಲಪುರ: ದಕ್ಷ ಆಡಳಿತ, ತಂತ್ರಜ್ಞಾನ ಆಧಾರಿತ ಸುಧಾರಣೆಗಳು ಹಾಗೂ ಪ್ರಗತಿಪರ ಚಿಂತನೆಗಳ ಮೂಲಕ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು 2028ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ ಎಂ. ಪಾಟೀಲ್ ಆಶಯ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 48ನೇ ಜನ್ಮದಿನದ ಅಂಗವಾಗಿ ಬಡ ರೋಗಿಗಳಿಗೆ ಹಣ್ಣು-ಹಂಪಲು ಹಾಗೂ ಹೊದಿಕೆಗಳನ್ನು ವಿತರಿಸಿ ಅವರು ಮಾತನಾಡಿದರು.
ಚಿತ್ತಾಪುರ ಕ್ಷೇತ್ರಕ್ಕಿಂತಲೂ ಹೆಚ್ಚಿನ ಅನುದಾನವನ್ನು ಅಫಜಲಪುರ ಮತಕ್ಷೇತ್ರದ ಅಭಿವೃದ್ಧಿಗೆ ಪ್ರಿಯಾಂಕ್ ಖರ್ಗೆ ಅವರು ನಿರಂತರವಾಗಿ ನೀಡಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳದೆ, ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ರೂಪಿಸಲು ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.
ಕೆಪಿಸಿಸಿ ಸದಸ್ಯ ಪಪ್ಪು ಪಟೇಲ್ ಮಾತನಾಡಿ, ಐಟಿ-ಬಿಟಿ ಸಚಿವರಾಗಿ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ತಂತ್ರಜ್ಞಾನ ಉದ್ಯಮಗಳನ್ನು ರಾಜ್ಯದ ಇತರ ನಗರಗಳಿಗೂ ವಿಸ್ತರಿಸುವ ಉದ್ದೇಶದ ‘ಬಿಯಾಂಡ್ ಬೆಂಗಳೂರು’ ಯೋಜನೆಗೆ ವೇಗ ನೀಡಿದ್ದಾರೆ. ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ಅವರು ಕೈಗೊಂಡಿರುವ ಉಪಕ್ರಮಗಳು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿವೆ ಎಂದರು.
ಜಿಪಂ ಮಾಜಿ ಸದಸ್ಯ ಮತೀನ್ ಪಟೇಲ್ ಮಾತನಾಡಿ, ಈ ಹಿಂದೆ ಸಮಾಜ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಪ್ರಿಯಾಂಕ್ ಖರ್ಗೆ, ಪ್ರಸ್ತುತ ಗೃಹ ಹಾಗೂ ಐಟಿ-ಬಿಟಿ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ 2028ರಲ್ಲಿ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮ ಆಶಯವಾಗಿದೆ ಎಂದರು.
ಎಪಿಎಂಸಿ ನಿರ್ದೇಶಕ ಶರಣು ಕುಂಬಾರ ಹಾಗೂ ಅಂಬರೀಷ್ ಬುರಲಿ ಮಾತನಾಡಿ, ಯಾವುದೇ ಇಲಾಖೆಯ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಪ್ರಿಯಾಂಕ್ ಖರ್ಗೆ ರಾಜ್ಯದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರು ಜಾತ್ಯತೀತ ನಾಯಕನಾಗಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಸಿದ್ದಾರ್ಥ್ ಬಸರಗಿಡ, ರಮೇಶ್ ಪೂಜಾರಿ, ಶಿವಾನಂದ ಗಾಡಿ ಸಾಹುಕಾರ, ಕಂಟೇಪ್ಪ ಬಳೂರ್ಗಿ, ಚಂದು ದೇಸಾಯಿ, ರಾಜಶೇಖರ ಪಾಟೀಲ್, ಮಹಾಲಿಂಗ ಅಂಗಡಿ, ಮಲ್ಲಯ್ಯ ಹೊಸಮಠ, ಅಣವೀರಯ್ಯ ಮಠಪತಿ, ಸಿದ್ದು ಚವಡಾಪುರ, ವಿಶ್ವನಾಥ್ ಮಲಘಾಣ, ಬಿಸ್ಮಿಲ್ಲಾ ಶೇಖ್, ದುಂಡಪ್ಪ ಜಮಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.