ಅಫಜಲಪುರ: ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಅನುದಾನಿತ ಪ್ರೌಢಶಾಲಾ ಶಿಕ್ಷಕ-ಶಿಕ್ಷಕೇತರ ಸಂಘದ ಜಿಲ್ಲಾ ಪ್ರತಿನಿಧಿ ಬಸವರಾಜ ನಿಂಬರ್ಗಿ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸೇವಾ ಭದ್ರತೆ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ನವೆಂಬರ್ 14ರಂದು ಕನಕಪುರದಿಂದ ಬೆಂಗಳೂರಿನವರೆಗೆ ಪಿಂಚಣಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ನವೆಂಬರ್ 16ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನವೆಂಬರ್ 17ರಿಂದ ಜಿಲ್ಲಾವಾರು ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಗುವುದು ಎಂದು ಹೇಳಿದರು.

ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಅನುದಾನರಹಿತ ಅವಧಿಯ ಸೇವೆಯನ್ನು ಪಿಂಚಣಿ ಹಾಗೂ ಇತರೆ ಸೌಲಭ್ಯಗಳಿಗಾಗಿ ಪರಿಗಣಿಸಬೇಕು. ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಬೇಕು. ಸರ್ಕಾರಿ ನೌಕರರಿಗೆ ನೀಡುತ್ತಿರುವ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುದಾನಿತ ನೌಕರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ತಾಲೂಕು ಮಟ್ಟದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲು ತೀರ್ಮಾನಿಸಲಾಗಿದೆ. ಈ ಕುರಿತು ತಾಲೂಕಿನ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಮತ್ತು ಸಿಬ್ಬಂದಿಯ ಸಭೆಯನ್ನು ಶೀಘ್ರದಲ್ಲೇ ಕರೆದು ದಿನಾಂಕ ನಿಗದಿಪಡಿಸಲಾಗುವುದು ಎಂದು ಬಸವರಾಜ ನಿಂಬರ್ಗಿ ತಿಳಿಸಿದರು.

ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅನುದಾನಿತ ಶಾಲಾ-ಕಾಲೇಜುಗಳ ಶಿಕ್ಷಕರು ಮತ್ತು ಸಿಬ್ಬಂದಿಯ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಅನುದಾನಿತ ಪ್ರೌಢಶಾಲಾ ಸಂಘದ ಅಧ್ಯಕ್ಷ ಎಸ್.ಎಂ. ಕರಿಕಲ್, ರಮೇಶ ಜೇವರ್ಗಿ, ಮಲ್ಲು ಬಜೇಂತ್ರಿ, ಯಲ್ಲಪ್ಪ ತಳವಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor