×
Ad

Afzalpur | ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Update: 2026-07-09 20:18 IST

ಅಫಜಲಪುರ : ತಾಲೂಕಿನ ಹಾವಳಗಾ ಹಾಗೂ ಕೊಳ್ಳೂರ ಗ್ರಾಮಗಳಿಂದ ಘತ್ತರಗಿ ಸರ್ಕಾರಿ ಪ್ರೌಢಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ, ರಸ್ತೆ ಬದಿಯ ಜಾಲಿ ಕಂಟಿ ಮತ್ತು ಗಿಡಗಂಟಿಗಳನ್ನು ತೆರವುಗೊಳಿಸಿ ಬಸ್ ಸಂಚಾರ ಆರಂಭಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಗುರುವಾರ ತಾಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಾವಳಗಾ–ಘತ್ತರಗಿ ರಸ್ತೆಯ ಎರಡೂ ಬದಿಗಳಲ್ಲಿ ದಟ್ಟವಾಗಿ ಬೆಳೆದಿರುವ ಮುಳ್ಳು ಕಂಟಿ ಮತ್ತು ಗಿಡಗಂಟಿಗಳಿಂದ ರಸ್ತೆ ಇಕ್ಕಟ್ಟಾಗಿದ್ದು, ಬಸ್ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಇದರಿಂದ ಸಾರಿಗೆ ಬಸ್ ಚಾಲಕರು ಸಂಚಾರ ನಡೆಸಲು ಹಿಂದೇಟು ಹಾಕುತ್ತಿದ್ದು, ವಿದ್ಯಾರ್ಥಿಗಳು ಪ್ರತಿದಿನ ಹಲವು ಕಿಲೋಮೀಟರ್ ಕಾಲ್ನಡಿಗೆಯಲ್ಲೇ ಶಾಲೆಗೆ ತೆರಳುವ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದರು.

ಈ ಕುರಿತು ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, “ಎರಡು ದಿನಗಳಲ್ಲಿ ಗಿಡಗಂಟಿ ತೆರವುಗೊಳಿಸಲಾಗುವುದು” ಎಂಬ ಭರವಸೆ ನೀಡುವುದನ್ನು ಹೊರತುಪಡಿಸಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಮಳೆಗಾಲದಲ್ಲಿ ಕಾಲ್ನಡಿಗೆಯಲ್ಲಿ ಶಾಲೆಗೆ ತೆರಳುವುದು ಅಪಾಯಕಾರಿಯಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ಧಕ್ಕೆಯಾಗುತ್ತಿದೆ. ಆದ್ದರಿಂದ ರಸ್ತೆ ಬದಿಯ ಗಿಡಗಂಟಿ ಹಾಗೂ ಮುಳ್ಳು ಕಂಟಿಗಳನ್ನು ತಕ್ಷಣ ತೆರವುಗೊಳಿಸಿ, ಬಸ್ ಸಂಚಾರವನ್ನು ಪುನರಾರಂಭಿಸಬೇಕು. ಅಲ್ಲಿಯವರೆಗೆ ಹೋರಾಟ ಮುಂದುವರಿಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು.

ಪ್ರತಿಭಟನೆಗೆ ಬೆಂಬಲ ಸೂಚಿಸಿದ ಹೋರಾಟಗಾರರಾದ ಸಾಗರ ಇಸ್ಪೂರ್, ಶ್ರೀಮಂತ ಬಿರಾದಾರ್ ಹಾಗೂ ನಾಮದೇವ ಕಡಕೋಳ, ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ರಸ್ತೆ ಸ್ವಚ್ಛಗೊಳಿಸಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಬಳಿಕ ವಿದ್ಯಾರ್ಥಿಗಳ ಮನವಿಯನ್ನು ಸ್ವೀಕರಿಸಿದ ತಾಲೂಕು ಪಂಚಾಯಿತಿ ಸಿಬ್ಬಂದಿ, ವಿಷಯವನ್ನು ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಭರವಸೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಹಿಂತೆಗೆದುಕೊಂಡರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News