Afzalpur | ಎಸ್‌ಟಿ ಪ್ರಮಾಣಪತ್ರಕ್ಕೆ ಆಗ್ರಹಿಸಿ ತಳವಾರ ಸಮಾಜದ ಪ್ರತಿಭಟನೆ

ಗ್ರೇಡ್–2 ತಹಶೀಲ್ದಾರ್ ಅಮಾನತುಗೆ ಒತ್ತಾಯ; ಶಾಸಕರ ನಿವಾಸದ ಎದುರು ಅಹೋರಾತ್ರಿ ಧರಣಿ ಎಚ್ಚರಿಕೆ

Update: 2026-07-27 19:19 IST

ಅಫಜಲಪುರ: ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಜಾತಿ ಪ್ರಮಾಣಪತ್ರ ನೀಡಬೇಕು ಹಾಗೂ ಅಫಜಲಪುರ ತಾಲೂಕಿನ ಗ್ರೇಡ್–2 ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಂಡು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ವಾಲ್ಮೀಕಿ ಸಮಾಜ ಸಂಘಟನೆಯ ವತಿಯಿಂದ ಸೋಮವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಬಳಿಕ ತಹಶೀಲ್ದಾರ್ ಕಚೇರಿಯಿಂದ ಶಾಸಕ ಎಂ.ವೈ. ಪಾಟೀಲ್ ಅವರ ನಿವಾಸದವರೆಗೆ ದೀರ್ಘದಂಡ ನಮಸ್ಕಾರ ಮಾಡುತ್ತಾ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ನ್ಯಾಯ ದೊರೆಯುವವರೆಗೆ ಶಾಸಕರ ನಿವಾಸದ ಎದುರು ಅಹೋರಾತ್ರಿ ಧರಣಿ ನಡೆಸುವುದಾಗಿ ಪ್ರತಿಭಟನಾಕಾರರು ಘೋಷಿಸಿದರು.

ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜ ಸಂಘದ ಅಧ್ಯಕ್ಷ ಸಂತೋಷ ತಳವಾರ ಮಾತನಾಡಿ, ಹಲವು ವರ್ಷಗಳಿಂದ ಮನವಿ ಹಾಗೂ ಪ್ರತಿಭಟನೆ ನಡೆಸುತ್ತಿದ್ದರೂ ತಳವಾರ ಸಮಾಜದ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಆಡಳಿತ ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುವ ಉದ್ದೇಶದಿಂದ ದೀರ್ಘದಂಡ ನಮಸ್ಕಾರ ಹೋರಾಟ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಮಾಜದ ಮುಖಂಡೆ ಸುನಿತಾ ತಳವಾರ ಮಾತನಾಡಿ, ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ತಳವಾರ ಸಮುದಾಯವನ್ನು ನಿರಂತರವಾಗಿ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಸಂವಿಧಾನಾತ್ಮಕವಾಗಿ ಎಸ್‌ಟಿ ಪಟ್ಟಿಯಲ್ಲಿರುವ ತಳವಾರರಿಗೆ ಜಾತಿ ಹಾಗೂ ಸಿಂಧುತ್ವ ಪ್ರಮಾಣಪತ್ರ ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ತಳವಾರ ಮಹಾಸಭೆ ಜಿಲ್ಲಾಧ್ಯಕ್ಷ ಚಂದ್ರಕಾಂತ್ ತಳವಾರ ಮಾತನಾಡಿ, ತಳವಾರ ಸಮುದಾಯದ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕು. ಸಮುದಾಯಕ್ಕೆ ಅನ್ಯಾಯ ಮಾಡುತ್ತಿರುವ ಅಫಜಲಪೂರ ತಾಲೂಕಿನ ಗ್ರೇಡ್–2 ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಂಡು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರವಿ ತಳವಾರ, ಭೋಗೇಶ್, ಪ್ರೇಮ , ಕರಣ್ ಬಿರೆದಾರ, ಸಿದ್ದರಾಮ ಚಿಕ್ಕವಲಗಿ ಸೇರಿದಂತೆ ಸಮಾಜದ ಮುಖಂಡರು ಹಾಗೂ ಸದಸ್ಯರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News