Aland | ಬೆಳೆ ವಿಮೆಗಾಗಿ ಆ.10ರಂದು ಬಿಜೆಪಿ ಬೃಹತ್ ಪ್ರತಿಭಟನೆ

Update: 2026-08-08 18:26 IST

ಆಳಂದ: ತಾಲೂಕಿಗೆ ಸಮರ್ಪಕ ಬೆಳೆ ವಿಮೆ ಮಂಜೂರಾಗದೆ ಸಾವಿರಾರು ರೈತರು ಸಂಕಷ್ಟಕ್ಕೆ ಸಿಲುಕಿರುವುದನ್ನು ಖಂಡಿಸಿ, ಬಿಜೆಪಿ ಆಳಂದ ಮಂಡಲ ವತಿಯಿಂದ ಆಗಸ್ಟ್ 10ರಂದು ಬೆಳಿಗ್ಗೆ 11 ಗಂಟೆಗೆ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಾಲೂಕಿನ ಅನೇಕ ಅರ್ಹ ರೈತರು ಬೆಳೆ ವಿಮೆ ಸೌಲಭ್ಯದಿಂದ ವಂಚಿತರಾಗಿದ್ದಾರೆ. ರೈತರ ಅಹವಾಲುಗಳಿಗೆ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಬರ ಪರಿಸ್ಥಿತಿ ಹಾಗೂ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಜೀವನಾಡಿಯಾಗಿದೆ. ವಂಚಿತರಾದ ರೈತರಿಗೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಲೂಕಿನ ವಿವಿಧ ಗ್ರಾಮಗಳ ಬೆಳೆ ವಿಮೆಯಿಂದ ವಂಚಿತರಾದ ರೈತರು, ರೈತ ಸಂಘಟನೆಗಳ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರ ಹಕ್ಕಿಗಾಗಿ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದ್ದಾರೆ.

ಪ್ರತಿಭಟನೆಯ ಮೂಲಕ ಬೆಳೆ ವಿಮೆಯಿಂದ ವಂಚಿತರಾದ ಎಲ್ಲ ಅರ್ಹ ರೈತರಿಗೆ ತಕ್ಷಣ ವಿಮೆ ಪರಿಹಾರ ಮಂಜೂರು ಮಾಡಬೇಕು, ರೈತರ ಅರ್ಜಿಗಳನ್ನು ಮರುಪರಿಶೀಲಿಸಿ ನ್ಯಾಯ ಒದಗಿಸಬೇಕು ಹಾಗೂ ರೈತರ ಸಮಸ್ಯೆಗಳಿಗೆ ಸರ್ಕಾರ ಶೀಘ್ರ ಸ್ಪಂದಿಸಬೇಕು ಎಂದು ಒತ್ತಾಯಿಸಲಾಗುವುದು ಎಂದರು.

ರೈತರ ಹಿತಾಸಕ್ತಿಯ ಈ ಹೋರಾಟದಲ್ಲಿ ತಾಲೂಕಿನ ಪ್ರತಿಯೊಬ್ಬ ರೈತರು ಸಕ್ರಿಯವಾಗಿ ಪಾಲ್ಗೊಂಡು ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಮಲ್ಲಿಕಾರ್ಜುನ ಕಂದಗೂಳೆ ಪ್ರಕಟಣೆಯಲ್ಲಿ ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News