Aland | ಸಾಲಬಾಧೆಯಿಂದ ರೈತ ಆತ್ಮಹತ್ಯೆ
ಆಳಂದ: ಸಾಲದ ಬಾಧೆ ಹಾಗೂ ಕೃಷಿಯಲ್ಲಿ ಉಂಟಾದ ನಷ್ಟದಿಂದ ಮನನೊಂದು ವಯೋವೃದ್ಧ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನಿಂಬರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಆಲೂರ ಬಿ. ಗ್ರಾಮದಲ್ಲಿ ನಡೆದಿದೆ.
ಮೃತರನ್ನು ವಿಠ್ಠಲ್ ಅಪ್ಪಯ್ಯ ಜೋಳದ (67) ಎಂದು ಗುರುತಿಸಲಾಗಿದೆ. ಇವರಿಗೆ ಪತ್ನಿ, ಓರ್ವ ಪುತ್ರ ಹಾಗೂ ನಾಲ್ವರು ಪುತ್ರಿಯರಿದ್ದಾರೆ.
ಮೂಲಗಳ ಪ್ರಕಾರ, ವಿಠ್ಠಲ್ ಜೋಳದ ಅವರು ಬ್ಯಾಂಕ್‌ನಲ್ಲಿ ಸುಮಾರು 2.30 ಲಕ್ಷ ರೂ. ಹಾಗೂ ಖಾಸಗಿಯಾಗಿ 5ರಿಂದ 6 ಲಕ್ಷ ರೂ. ಸಾಲ ಪಡೆದಿದ್ದರು ಎನ್ನಲಾಗಿದೆ. ತಮ್ಮ ಆರು ಎಕರೆ ಜಮೀನಿನಲ್ಲಿ ಬಾವಿ ತೋಡಿಸಿ ರಿಂಗ್‌ಗಳನ್ನು ಅಳವಡಿಸಲು ಕಳೆದ ವರ್ಷ ಸುಮಾರು 5ರಿಂದ 6 ಲಕ್ಷ ರೂ. ಖರ್ಚು ಮಾಡಿದ್ದರು. ಆದರೆ ಬಾವಿಯಲ್ಲಿ ಎರಡು-ಮೂರು ತಿಂಗಳು ಮಾತ್ರ ನೀರು ಲಭ್ಯವಾಗಿ ಬಳಿಕ ನೀರು ಬತ್ತಿಹೋಗಿದ್ದರಿಂದ ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಆ.18ರಂದು ತಮ್ಮ ಹೊಲದಲ್ಲಿ ವಿಷ ಸೇವಿಸಿದ್ದ ಅವರು ತೀವ್ರ ಅಸ್ವಸ್ಥರಾಗಿದ್ದರು. ಕುಟುಂಬಸ್ಥರು ತಕ್ಷಣ ಅವರನ್ನು ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆ.23ರಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರ ಅಂತ್ಯಕ್ರಿಯೆಯನ್ನು ಸೋಮವಾರ ಸ್ವಗ್ರಾಮದಲ್ಲಿ ನೆರವೇರಿಸಲಾಯಿತು. ಈ ಕುರಿತು ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.