ಆಳಂದ | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕರ್ನಾಟಕ ಭೀಮ ಸೇನೆಯಿಂದ ಪ್ರತಿಭಟನೆ
ಆಳಂದ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಕರ್ನಾಟಕ ಭೀಮಸೇನೆ ವತಿಯಿಂದ ಶುಕ್ರವಾರ ಪಟ್ಟಣದ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ಭೀಮಸೇನೆ ಕಲ್ಯಾಣ ಕರ್ನಾಟಕ ಪ್ರದೇಶ ಅಧ್ಯಕ್ಷ ಬಾಬುರಾವ್ ಅರುಣೋದಯ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ರಮೇಶ ಲೋಹಾರ, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದರು.
ಪ್ರಕರಣದ ವಿರುದ್ಧ ನಿರಾಹಾರ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ಸ್ಥಳಾಂತರಿಸಿರುವುದು ಹಾಗೂ ಪ್ರತಿಭಟನಾನಿರತ ವಿದ್ಯಾರ್ಥಿಗಳು ಮತ್ತು ಹೋರಾಟಗಾರರ ಮೇಲೆ ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅವರು ಖಂಡಿಸಿದರು.
ಪ್ರತಿಭಟನೆಯ ಬಳಿಕ ಮನವಿ ಸಲ್ಲಿಸಿದ ಪದಾಧಿಕಾರಿಗಳು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಮಾನಸಿಕ ಆಘಾತಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 5 ಕೋಟಿ ರೂ. ಪರಿಹಾರ ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.
ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಹಾಗೂ ಸಮಯಬದ್ಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾಕಾರರು ಹಾಗೂ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಕ್ಕೆ ಆದೇಶಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಪಾರದರ್ಶಕ, ಸುರಕ್ಷಿತ ಹಾಗೂ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಕರ್ನಾಟಕ ಭೀಮಸೇನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.