Aland | ಖಜೂರಿ ವಸತಿ ಶಾಲೆಯ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ: ಶಾಸಕ ಬಿ.ಆರ್.ಪಾಟೀಲ್
ಆಳಂದ : ತಾಲೂಕಿನ ಖಜೂರಿ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಗೆ ರಾಜ್ಯದ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ಆರ್. ಪಾಟೀಲ್ ಭೇಟಿ ನೀಡಿ, ಶಾಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಸ್ಥಳದಲ್ಲೇ ಪರಿಶೀಲಿಸಿದರು.
ಶಾಲೆಯ ಮುಖ್ಯೋಪಾಧ್ಯಾಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ ಅವರು, ನೀರಿನ ಸರಬರಾಜಿನಲ್ಲಿ ಉಂಟಾಗಿರುವ ತೊಂದರೆಗಳ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡರು. ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ಶೀಘ್ರದಲ್ಲೇ ಶಾಶ್ವತ ಪರಿಹಾರ ಕಲ್ಪಿಸುವಂತೆ ಸೂಚನೆ ನೀಡಿದರು.
ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ತಾತ್ಕಾಲಿಕವಾಗಿ ಪರ್ಯಾಯ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಶಾಸಕ ಬಿ.ಆರ್. ಪಾಟೀಲ್, ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವಂತೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ ಸಾವಳೇಶ್ವರ ಅವರು ಖಜೂರಿ ಇಂದಿರಾ ಗಾಂಧಿ ವಸತಿ ಶಾಲೆ ಸೇರಿದಂತೆ ಇತರ ಸರ್ಕಾರಿ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಸಿಬ್ಬಂದಿ ಕೊರತೆ ಮತ್ತು ಮೂಲಸೌಕರ್ಯಗಳ ಅಭಾವ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು.
ಈ ವೇಳೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಶಿವುಪುತ್ರಪ್ಪಾ ಪಾಟೀಲ, ಭೀಮರಾವ್ ಢಗೆ, ಪಿಕೆಪಿಎಸ್ ಅಧ್ಯಕ್ಷ ಶರಣಪ್ಪ ಢಗೆ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.