ಕಲಬುರಗಿ: ಎಸ್‌ಐಆರ್‌ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಹಕ್ಕಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಆರೋಪಿಸಿರುವ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ, ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ದೇಶದ ಜನರ ಮತದಾನದ ಹಕ್ಕನ್ನು ಖಾತರಿಪಡಿಸಬೇಕು ಎಂದು ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸೌಹಾರ್ದತೆಗೆ ಹೆಸರಾಗಿರುವ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಏಣಕೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ನಮೂನೆ-7ರ ದುರ್ಬಳಕೆ ನಡೆದಿದೆ ಎಂದು ಆರೋಪಿಸಿದರು. ಏಣಕೂರು ಗ್ರಾಮದಲ್ಲಿ ಸುಮಾರು 266 ಮುಸ್ಲಿಂ ಮತದಾರರ ಹೆಸರುಗಳಿಗೆ ಆಕ್ಷೇಪಣೆ ಸಲ್ಲಿಸಲಾಗಿದ್ದು, ನಂತರ ಕೆಲ ದೂರುದಾರರು ತಮಗೆ ಸಂಪೂರ್ಣ ಮಾಹಿತಿ ಇರಲಿಲ್ಲ ಎಂದು ಹೇಳಿ ಅರ್ಜಿಗಳನ್ನು ಹಿಂಪಡೆಯಲು ಮುಂದಾಗಿದ್ದಾರೆ ಎಂದು ತಿಳಿಸಿದರು.

ಭಾಲ್ಕಿ ತಾಲ್ಲೂಕಿನ ವಿವಿಧ ಗ್ರಾಮಗಳು ಹಾಗೂ ಪಟ್ಟಣದ ಹಲವು ಬೂತ್‌ಗಳಲ್ಲಿ ಸಾವಿರಾರು ನಮೂನೆ-7 ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಅರ್ಜಿಗಳ ಹಿಂದೆ ಸಂಘಟಿತ ಪ್ರಯತ್ನ ನಡೆದಿರುವ ಬಗ್ಗೆ ತನಿಖೆ ನಡೆಸಬೇಕು. ದಾಖಲಾತಿಗಳಿಲ್ಲದೆ ನಮೂನೆ-7 ಸಲ್ಲಿಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆ.ನೀಲಾ ಒತ್ತಾಯಿಸಿದರು.

ಮುಸ್ಲಿಂ ಮತದಾರರನ್ನು ಗುರಿಯಾಗಿಸಿ ಬಿಜೆಪಿ ಪಕ್ಷದ ವತಿಯಿಂದ ಮತದಾನದ ಹಕ್ಕು ಕಸಿದುಕೊಳ್ಳುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಅರ್ಜಿ ಸಲ್ಲಿಸಲು ಯಾರಾದರೂ ಒತ್ತಡ ಅಥವಾ ಪ್ರಚೋದನೆ ನೀಡಿದ್ದರೆ ಅವರ ವಿರುದ್ಧವೂ ತನಿಖೆ ನಡೆಸಬೇಕು. ಅಲ್ಲಲ್ಲಿ ದಾಖಲಾತಿಗಳಿಲ್ಲದೆ ನಮೂನೆ-7 ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್‌ಐಆರ್‌ ಪ್ರಕ್ರಿಯೆಯನ್ನು ರದ್ದುಪಡಿಸಬೇಕು, ಅಳಿಸಲಾಗಿರುವ ಮತದಾರರ ಹೆಸರುಗಳನ್ನು ಮರುಸ್ಥಾಪಿಸಬೇಕು ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಖಚಿತಪಡಿಸಬೇಕು ಎಂದು ಆಗ್ರಹಿಸಿದರು. ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸುಧಾಮ ಧನ್ನಿ, ಭೀಮಶೆಟ್ಟಿ ಯಂಪಳ್ಳಿ, ಪಾಂಡುರಂಗ ಮಾವಿನಕರ ಹಾಗೂ ಗುರು ಚಾಂದಕವಠೆ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor