ಸತೀಶ ಭಟ್ಟರ್ಕಿ

ವಾಡಿ : ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡ್ ನಂ. 23ರ ಇಂದಿರಾ ನಗರದಲ್ಲಿ (ಭಾರತ್ ಕ್ವಾರಿ) ನಡೆಯುತ್ತಿದೆ ಎನ್ನಲಾದ ಅಕ್ರಮ ಗಣಿಗಾರಿಕೆಯನ್ನು ತಕ್ಷಣ ಸ್ಥಗಿತಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಸತೀಶ ಭಟ್ಟರ್ಕಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಇಂದಿರಾ ನಗರದ ಸರ್ವೆ ನಂ. 66, 67, 29, 30 ಮತ್ತು 31ರಲ್ಲಿ ಸರ್ಕಾರದಿಂದ ಯಾವುದೇ ರೀತಿಯ ಪರವಾನಗಿ ಪಡೆಯದೆ ಅನಧಿಕೃತವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ನೂರಾರು ಅಡಿ ಆಳದಲ್ಲಿ ಗಣಿಗಾರಿಕೆ ನಡೆಸುತ್ತಿರುವುದರಿಂದ ದಶಕಗಳಿಂದ ಇಂದಿರಾ ನಗರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಆತಂಕ ಎದುರಿಸುತ್ತಿದ್ದಾರೆ. ಈ ಹಿಂದೆ ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ಗಣಿಯಲ್ಲಿ ಬಿದ್ದು ಮೃತಪಟ್ಟಿದ್ದರು ಎನ್ನಲಾಗಿದೆ. ಇಂತಹ ಘಟನೆ ಮರುಕಳಿಸಬಾರದು ಎಂದಾದರೆ ಅಕ್ರಮ ಗಣಿಗಾರಿಕೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಅಕ್ರಮ ಗಣಿಗಾರಿಕೆಯಿಂದಾಗಿ ಶಾಲಾ ಮಕ್ಕಳು, ನಿವಾಸಿಗಳು ಹಾಗೂ ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್ ಸಂಚಾರಕ್ಕೂ ದಾರಿಯಿಲ್ಲದಂತಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಅಕ್ರಮ ಗಣಿಗಾರಿಕೆ ಕುರಿತು ಪ್ರಶ್ನಿಸಲು ತೆರಳುವ ಸಾರ್ವಜನಿಕರು ಹಾಗೂ ಸರ್ಕಾರಿ ಅಧಿಕಾರಿಗಳಿಗೂ ಗಣಿ ಮಾಲೀಕರು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಜಿಲ್ಲಾಡಳಿತ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ನ್ಯಾಯಕ್ಕಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸಮಿತಿ ಎಚ್ಚರಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ