ಆಳಂದ ನ್ಯಾಯಾಲಯದಲ್ಲಿ ವಿಶ್ವ ಮಾನವ ಕಳ್ಳ ಸಾಗಣೆ ವಿರೋಧಿ ದಿನ ಆಚರಣೆ

ಕಾನೂನು ಅರಿವು ಮೂಲಕ ಅಪರಾಧ ತಡೆಗೆ ಕರೆ

Update: 2026-07-31 21:14 IST

ಆಳಂದ: ಮಾನವ ಕಳ್ಳ ಸಾಗಣೆ ಸಮಾಜದ ವಿರುದ್ಧದ ಅತ್ಯಂತ ಅಮಾನವೀಯ ಅಪರಾಧವಾಗಿದ್ದು, ಹೆಣ್ಣು ಹಾಗೂ ಗಂಡು ಮಕ್ಕಳನ್ನು ಯಾವುದೇ ಕಾರಣಕ್ಕೂ ಮಾರಾಟ ಅಥವಾ ಶೋಷಣೆಗೆ ಬಲಿಯಾಗದಂತೆ ತಡೆಯುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ವಿಜಯಕುಮಾರ್ ಎಸ್. ಜೇಟ್ಲಾ ಹೇಳಿದರು.

ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ "ವಿಶ್ವ ಮಾನವ ಕಳ್ಳ ಸಾಗಣೆ ವಿರೋಧಿ ದಿನ" ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಮಾರಾಟ, ಬಾಲಕಾರ್ಮಿಕ ಪದ್ಧತಿ ಹಾಗೂ ಮಾನವ ಕಳ್ಳ ಸಾಗಣೆ ಪ್ರಕರಣಗಳನ್ನು ತಡೆಗಟ್ಟಲು ಕಾನೂನು ಅರಿವು ಅತ್ಯಗತ್ಯವಾಗಿದೆ. ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡುವ ಮೂಲಕ ಸಮಾಜದ ರಕ್ಷಣೆಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ನೆರವು ಹಾಗೂ ಜಾಗೃತಿ ಕಾರ್ಯಕ್ರಮಗಳ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಕುಮಾರಿ ಸುಮನ್ ಚಿತ್ತರಗಿ, ಉದ್ಯೋಗದ ನೆಪದಲ್ಲಿ ಹೆಚ್ಚಿನ ವೇತನದ ಆಮಿಷ ಒಡ್ಡಿ ಮಹಿಳೆಯರು ಹಾಗೂ ಯುವತಿಯರನ್ನು ವಂಚಿಸಿ ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಆದ್ದರಿಂದ ಉದ್ಯೋಗಕ್ಕಾಗಿ ಹೊರಡುವವರು ಸಮರ್ಪಕ ಮಾಹಿತಿ ಪಡೆದು ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ನ್ಯಾಯವಾದಿ ದೇವಾನಂದ ಹೊಂದಲೂರಕರ್ ಮಾತನಾಡಿದರು. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕಮಲಾಕರ ವಿ. ರಾಠೋಡ ಅಧ್ಯಕ್ಷತೆ ವಹಿಸಿದ್ದರು. ಜೆಎಂಎಫ್‌ಸಿ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ಪ್ರವೀಣ್ ಕಮ್ಮಾರ್, ಸಹಾಯಕ ಸರ್ಕಾರಿ ಅಭಿಯೋಜಕ ಇಸ್ರಾಯಿಲ್ ಪಟೇಲ್, ಜ್ಯೋತಿ ವಿ. ಬಂದಿ, ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಬಲಭೀಮ ಟಿ. ಸಿಂಧೆ, ನ್ಯಾಯವಾದಿಗಳು, ಕಕ್ಷಿದಾರರು ಹಾಗೂ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

ನ್ಯಾಯವಾದಿ ಸುಧೀರ್ ಬಿ. ಪಡಶೆಟ್ಟಿ ನಿರೂಪಿಸಿದರು. ನ್ಯಾಯವಾದಿ ಕಲ್ಯಾಣರಾವ ಎಂ. ಶೇರಿಕಾರ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News