ಕಲಬುರಗಿ ಪೀಠದ ಮಾಹಿತಿ ಆಯುಕ್ತರಾಗಿ ಬಿ.ವೆಂಕಟ ಸಿಂಗ್ ಅಧಿಕಾರ ಸ್ವೀಕಾರ
ರಾಯಚೂರು : ಸಾರ್ವಜನಿಕ ಹಿತಾಸಕ್ತಿಯಡಿ ಕೋರುವ ಮಾಹಿತಿಯನ್ನು ತ್ವರಿತಗತಿಯಲ್ಲಿ ಸಾರ್ವಜನಿಕರಿಗೆ ಒದಗಿಸುವುದೇ ತಮ್ಮ ಪ್ರಾಥಮಿಕ ಆದ್ಯತೆಯಾಗಿರಲಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಹೊಸ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್ ತಿಳಿಸಿದ್ದಾರೆ.
ಅವರು ಅ.21ರಂದು ಕಲಬುರಗಿಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಾಹಿತಿ ಅಧಿಕಾರಿಗಳಿಗೆ ದಂಡ ವಿಧಿಸುವ ಬದಲು, ಸಾರ್ವಜನಿಕರಿಗೆ ಮಾಹಿತಿ ನೀಡುವ ಮೂಲಕ ನ್ಯಾಯ ಒದಗಿಸುವುದು ಪೀಠದ ಮುಖ್ಯ ಉದ್ದೇಶವಾಗಿರಲಿದೆ ಎಂದು ಹೇಳಿದರು.
ಮಾಹಿತಿ ಹಕ್ಕು ಕಾಯ್ದೆಯನ್ನು 2005ರಲ್ಲಿ ಜಾರಿಗೆ ತಂದ ರಾಜ್ಯಗಳಲ್ಲಿ ಕರ್ನಾಟಕ ಮೊದಲನೆಯದು ಎಂದು ನೆನಪಿಸಿಕೊಂಡ ಅವರು, ಕಲಬುರಗಿ ಪೀಠದಲ್ಲಿ ಸುಮಾರು 7 ಸಾವಿರ ಅರ್ಜಿಗಳು ಬಾಕಿ ಇದ್ದು, ಅವುಗಳನ್ನು ಹಂತ ಹಂತವಾಗಿ ವಿಲೇವಾರಿ ಮಾಡುವ ಯೋಜನೆ ಇದೆ ಎಂದರು.
ರಾಜ್ಯ ಮಟ್ಟದಲ್ಲಿ ಸುಮಾರು 38 ಸಾವಿರ ಅರ್ಜಿಗಳು ವಿಚಾರಣೆಗೆ ಬಾಕಿ ಇದ್ದು, ಹೊಸ ಆಯುಕ್ತರ ನೇಮಕದಿಂದ ವಿಲೇವಾರಿ ಪ್ರಕ್ರಿಯೆ ವೇಗ ಪಡೆಯಲಿದೆ. ಪಾರದರ್ಶಕವಾಗಿ ಹಾಗೂ ನ್ಯಾಯಸಮ್ಮತವಾಗಿ ಸಾರ್ವಜನಿಕರಿಗೆ ಮಾಹಿತಿ ಒದಗಿಸಲು ಆಯೋಗ ಬದ್ಧವಾಗಿದೆ ಎಂದು ತಿಳಿಸಿದರು.
ಕಳೆದ ಕೆಲವು ವರ್ಷಗಳಿಂದ ಕಲಬುರಗಿ ಪೀಠ ಶಾಶ್ವತವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಸ್ವಂತ ಕಟ್ಟಡ ಇಲ್ಲದ ಕಾರಣ, ಹೈಕೋರ್ಟ್ ಹತ್ತಿರ ಸಿ.ಎ. ಸೈಟ್‌ನಲ್ಲಿ ನಿವೇಶನ ಪಡೆಯಲು ನಗರಾಭಿವೃದ್ಧಿ ಪ್ರಾಧಿಕಾರವನ್ನು ಸಂಪರ್ಕಿಸುವ ಯೋಜನೆ ಇದೆ ಎಂದರು.
ಅಧಿಕಾರಿಗಳು ಮಾಹಿತಿ ಹಕ್ಕು ಕಾಯ್ದೆಯ ಅರ್ಥವನ್ನು ಸರಿಯಾಗಿ ತಿಳಿಯದೆ ಅನೇಕ ಅರ್ಜಿಗಳನ್ನು ವಿಲೇವಾರಿ ಮಾಡದೇ ಇಟ್ಟುಕೊಳ್ಳುತ್ತಿರುವುದರಿಂದ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಕಲಬುರಗಿ ವಿಭಾಗದ ಏಳು ಜಿಲ್ಲೆಗಳ ಮಟ್ಟದಲ್ಲಿ ಮಾಹಿತಿ ಹಕ್ಕು ಕಾಯ್ದೆ ಕುರಿತು ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು ಎಂದು ಆಯುಕ್ತ ಬಿ.ವೆಂಕಟಸಿಂಗ್ ತಿಳಿಸಿದರು.