ಕಲಬುರಗಿ, ನ.28: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್‌ಡಿಬಿ) 7ನೇ ಅಧ್ಯಕ್ಷರಾಗಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಶನಿವಾರ ನಗರದ ಐವಾನ್-ಎ-ಶಾಹಿ ಪ್ರದೇಶದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಈ ಮಹತ್ವದ ಜವಾಬ್ದಾರಿ ನೀಡಿದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜ್ಯದ ಸಚಿವರು, ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಎರಡು ಬಾರಿ ಶಾಸಕರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ತಮಗೆ ಇದೀಗ ಮಹತ್ವದ ಜವಾಬ್ದಾರಿ ದೊರೆತಿದೆ. ಹಿರಿಯ ಶಾಸಕರು ಮತ್ತು ಸಚಿವರ ಮಾರ್ಗದರ್ಶನದಲ್ಲಿ ಮಂಡಳಿಯ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಹಿಂದಿನ ಅಧ್ಯಕ್ಷರ ಅವಧಿಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ವಿಶೇಷವಾಗಿ ಗ್ರಾಮೀಣ ಭಾಗದ ಆರ್ಥಿಕ ಬಲವರ್ಧನೆಗಾಗಿ ಹೈನುಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಸಂವಿಧಾನದ ಕಲಂ 371(ಜೆ) ಆಶಯದಂತೆ ಶಿಕ್ಷಣ, ಉದ್ಯೋಗ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ಪರಿಣಾಮಕಾರಿ ಕೆಲಸ ಮಾಡಲಾಗುವುದು. ಮಂಡಳಿಗೆ ಕೇಂದ್ರ ಸರ್ಕಾರದಿಂದಲೂ ಪ್ರತ್ಯೇಕ ಅನುದಾನ ದೊರೆಯುವಂತೆ ಈಗಾಗಲೇ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗೃಹ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವರಾದ ಶರಣಪ್ರಕಾಶ ಪಾಟೀಲ್, ಈಶ್ವರ್ ಖಂಡ್ರೆ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಕನೀಜ್ ಫಾತಿಮಾ, ಯಾದಗಿರಿ ಜಿಲ್ಲೆಯ ಶಾಸಕರು ಸೇರಿದಂತೆ ಹಲವು ಜನಪ್ರತಿನಿಧಿಗಳು, ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ