ಕಲಬುರಗಿ ಜಿಲ್ಲೆಯಲ್ಲಿ 25 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿಗೆ ಸಚಿವ ಸಂಪುಟದ ಅನುಮೋದನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

Update: 2026-07-19 22:24 IST

ಬೆಂಗಳೂರು/ಕಲಬುರಗಿ, ಜು.19: ಕಲಬುರಗಿ ಜಿಲ್ಲೆಯ ಜೇವರ್ಗಿ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 25 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಯೋಜನೆಯಡಿ ಒಟ್ಟು 20.65 ಕಿಲೋಮೀಟರ್ ರಸ್ತೆ ಅಭಿವೃದ್ಧಿಪಡಿಸಲಾಗುವುದು. ರಾಜ್ಯ ಹೆದ್ದಾರಿ–156ರ ಕಟ್ಟಿಸಂಗಾವಿ–ಯನಗುಂಟಿ–ನರಿಬೋಳ–ಮಾಲ್-ಕೆ ಕ್ರಾಸ್ ಮಾರ್ಗದ 9.045 ಕಿಲೋಮೀಟರ್ ರಸ್ತೆ ಹಾಗೂ ಕೆಲ್ಲೂರು–ಆಂದೋಲಾ ಜಿಲ್ಲಾ ಮುಖ್ಯ ರಸ್ತೆಯ 3.900 ಕಿಲೋಮೀಟರ್ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ಪ್ರಸ್ತುತ 3.75 ಮೀಟರ್ ಅಗಲವಿರುವ ರಸ್ತೆಯನ್ನು ಆಯ್ದ ಭಾಗಗಳಲ್ಲಿ 5.5 ಮೀಟರ್ ಅಗಲಕ್ಕೆ ವಿಸ್ತರಿಸಿ ಗುಣಮಟ್ಟದ ರಸ್ತೆ ನಿರ್ಮಿಸಲಾಗುವುದು ಎಂದು ಅವರು ತಿಳಿಸಿದರು.

ಉತ್ತಮ ರಸ್ತೆ ಕೇವಲ ಸಂಚಾರದ ಸೌಲಭ್ಯವಲ್ಲ, ಗ್ರಾಮೀಣಾಭಿವೃದ್ಧಿಯ ಬೆನ್ನೆಲುಬಾಗಿದೆ. ಗುಣಮಟ್ಟದ ರಸ್ತೆ ನಿರ್ಮಾಣದಿಂದ ಜನರ ಜೀವನಮಟ್ಟ ಸುಧಾರಿಸುವುದರ ಜೊತೆಗೆ ರೈತರಿಗೆ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗುತ್ತದೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ಮತ್ತು ವೇಗವಾದ ಸಂಚಾರ ವ್ಯವಸ್ಥೆ ದೊರೆಯಲಿದ್ದು, ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೂ ಹೊಸ ಚೈತನ್ಯ ಸಿಗಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಈ ರಸ್ತೆ ಅಭಿವೃದ್ಧಿಯಿಂದ ಕಡಕೋಳ, ಕಟ್ಟಿಸಂಗಾವಿ, ನರಿಬೋಳ, ಕೆಲ್ಲೂರು ಹಾಗೂ ಆಂದೋಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನರಿಗೆ ಉತ್ತಮ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದರಿಂದ ಈ ಭಾಗದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಹೊಸ ವೇಗ ದೊರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಎಲ್ಲ ಭಾಗಗಳಿಗೂ ಸಮಾನ ಅಭಿವೃದ್ಧಿ ತಲುಪಿಸುವುದು ಸರ್ಕಾರದ ಬದ್ಧತೆಯಾಗಿದ್ದು, ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯವನ್ನು ಇನ್ನಷ್ಟು ಸದೃಢಗೊಳಿಸುವ ಕಾರ್ಯ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News