ಕಲಬುರಗಿಯಲ್ಲಿ 1,700 ಕೋಟಿ ರೂ. ವೆಚ್ಚದ ಜವಳಿ ಪಾರ್ಕ್‌ಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್: ಪ್ರಿಯಾಂಕ್ ಖರ್ಗೆ
ಕಲಬುರಗಿ : ಜಿಲ್ಲೆಯ ಮಹತ್ವಾಕಾಂಕ್ಷೆಯ ಜವಳಿ ಪಾರ್ಕ್ ಯೋಜನೆಗೆ ರಾಜ್ಯ ಸರ್ಕಾರ ಮಹತ್ವದ ಉತ್ತೇಜನ ನೀಡಿದ್ದು, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ಯೋಜನೆ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸುಮಾರು 1,000 ಎಕರೆ ಪ್ರದೇಶದಲ್ಲಿ 1,700 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಜವಳಿ ಪಾರ್ಕ್ ನಿರ್ಮಾಣವಾಗಲಿದ್ದು, ಮೊದಲ ಹಂತದಲ್ಲಿ 320 ಕೋಟಿ ರೂ. ವೆಚ್ಚದಲ್ಲಿ ಕೆಐಎಡಿಬಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕಲಬುರಗಿ ತಾಲೂಕಿನ ನದಿಸಿನ್ನೂರು ಹಾಗೂ ಕಿರಣಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯಡಿ ಈ ಯೋಜನೆ ಜಾರಿಯಾಗಲಿದೆ. ಕೇಂದ್ರ ಸರ್ಕಾರದ ಪಿಎಂ ಮಿತ್ರ (PM MITRA) ಯೋಜನೆಯಡಿ ದೊರೆಯುವ ₹500 ಕೋಟಿ ಬಂಡವಾಳ ಸಹಾಯಧನ ಹಾಗೂ ಕೆಐಎಡಿಬಿ ಅನುದಾನದ ನೆರವಿನಿಂದ ಯೋಜನೆಯನ್ನು ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಜವಳಿ ಪಾರ್ಕ್‌ನಿಂದ ಸುಮಾರು 1 ಲಕ್ಷ ಮಂದಿಗೆ ನೇರ ಉದ್ಯೋಗ ಹಾಗೂ 2 ಲಕ್ಷಕ್ಕೂ ಹೆಚ್ಚು ಮಂದಿಗೆ ಪರೋಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದ್ದು, ಕಲ್ಯಾಣ ಕರ್ನಾಟಕ ಭಾಗದ ಕೈಗಾರಿಕಾ ಅಭಿವೃದ್ಧಿಗೆ ಹೊಸ ಚೈತನ್ಯ ದೊರೆಯಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.
ಈಗಾಗಲೇ ಹಲವು ಜವಳಿ ಉದ್ಯಮಗಳು ಕಲಬುರಗಿ ಜವಳಿ ಪಾರ್ಕ್‌ನಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದು, ಯೋಜನೆಯಿಂದ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.