ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಜಾತಿ ಆಧಾರಿತ ಅವಮಾನ ಖಂಡನೀಯ: ಕರ್ನಾಟಕ ಭೀಮ್ ಸೇನೆ
ಕಲಬುರಗಿ: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಆಗಸ್ಟ್ 8ರಂದು ನಡೆದ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಮಾರಂಭದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ ಬಳಿಕ, ಅವರು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಕಾರ್ಯಕ್ರಮ ನಡೆದ ಸ್ಥಳವನ್ನು ಶುದ್ಧೀಕರಣ ಯಾಗದ ಮೂಲಕ ಸ್ವಚ್ಛಗೊಳಿಸಲಾಗಿದೆ ಎನ್ನಲಾದ ಘಟನೆ ಖಂಡನೀಯ ಎಂದು ಕರ್ನಾಟಕ ಭೀಮ್ ಸೇನೆ (ರಿ.) ಜಿಲ್ಲಾಧ್ಯಕ್ಷ ಸಂಜಯ್ ಭೋಸಲೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡುತ್ತಿರುವ ಸಂದರ್ಭದಲ್ಲಿ ಜಾತಿಯ ಹೆಸರಿನಲ್ಲಿ ವ್ಯಕ್ತಿಯೊಬ್ಬರನ್ನು ಅವಮಾನಿಸುವಂತಹ ಘಟನೆಗಳು ನಡೆಯುತ್ತಿರುವುದು ವಿಷಾದನೀಯ ಎಂದಿದ್ದಾರೆ.
ಭಾರತೀಯ ಸಮಾಜದ ಒಂದು ಕಡೆ ಪ್ರಗತಿಯ ಸಂಕೇತವಾಗಿ ಚಂದ್ರನ ದಕ್ಷಿಣ ಧ್ರುವವನ್ನು ತಲುಪುವಂತಹ ಸಾಧನೆ ಮಾಡುತ್ತಿದ್ದರೆ, ಮತ್ತೊಂದೆಡೆ ದಲಿತರನ್ನು ಅಸ್ಪೃಶ್ಯತೆಯ ದೃಷ್ಟಿಯಿಂದ ನೋಡುವ ಮನೋಭಾವ ಇನ್ನೂ ಜೀವಂತವಾಗಿರುವುದು ಸಮಾಜದ ಎರಡು ಮುಖಗಳನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಜಾತಿಯ ಹೆಸರಿನಲ್ಲಿ ನಡೆದಿರುವ ಎನ್ನಲಾದ ಅವಮಾನಕರ ಹಾಗೂ ಅಮಾನವೀಯ ಕೃತ್ಯವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿರುವ ಭೋಸಲೆ, ದೇಶದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಆಚರಣೆಗಳು ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ ಎಂಬುದಕ್ಕೆ ಇಂತಹ ಘಟನೆಗಳು ಸಾಕ್ಷಿಯಾಗಿವೆ ಎಂದರು.
ಶುದ್ಧೀಕರಣದ ನೆಪದಲ್ಲಿ ಅಸ್ಪೃಶ್ಯತೆಯನ್ನು ಆಚರಿಸಿ, ಖರ್ಗೆ ಅವರ ಘನತೆಗೆ ಚ್ಯುತಿ ಉಂಟುಮಾಡಿದವರ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನುಬದ್ಧವಾಗಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕುವ ಮೂಲಕ ಸಂವಿಧಾನದ ಆಶಯಗಳನ್ನು ರಕ್ಷಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಜಯ್ ಭೋಸಲೆ ಒತ್ತಾಯಿಸಿದ್ದಾರೆ.