ಚಿತ್ತಾಪುರದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ
ಚಿತ್ತಾಪುರ: ಪಟ್ಟಣದ ಪ್ರಜಾಸೌಧದ ಆವರಣದಲ್ಲಿ ವೀರ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿದರು.
ನಂತರ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಧೈರ್ಯ, ಸಾಹಸ ಮತ್ತು ಶೌರ್ಯಕ್ಕೆ ಹೆಸರಾದ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ಹೋರಾಡಿ ನಾಡಿನ ಸ್ವಾಭಿಮಾನ ಹಾಗೂ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ ವೀರ ವನಿತೆಯಾಗಿದ್ದಾರೆ. ಅವರ ಆದರ್ಶಗಳು ಇಂದಿನ ಯುವಜನತೆಗೆ ಸದಾ ಪ್ರೇರಣೆಯಾಗಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.