ಚಿಂಚೋಳಿ | ಕುಡಿಯುವ ನೀರಿನ ಸಮಸ್ಯೆ: ಪ್ರಜಾಸೇವಾ ಕಾರ್ಯಕ್ರಮಕ್ಕೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ
ಚಿಂಚೋಳಿ: ಚಂದನಕೆರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಪ್ರಜಾಸೇವಾ ಕಾರ್ಯಕ್ರಮಕ್ಕೇ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಗ್ರಾಮದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಗ್ರಾಮಸ್ಥರು ಬೀಗ ಹಾಕಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಕುಡಿಯುವ ನೀರಿಗಾಗಿ ಪರದಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಸ್ಥಳಕ್ಕೆ ಆಗಮಿಸಿದ ಶಾಸಕರು ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದರು. ಶಾಸಕರ ಮಧ್ಯಸ್ಥಿಕೆಯಲ್ಲಿ ಗ್ರಾಮಸ್ಥರು ಬೀಗ ತೆರವುಗೊಳಿಸಿದ ಬಳಿಕ ಪ್ರಜಾಸೇವಾ ಕಾರ್ಯಕ್ರಮ ಮುಂದುವರಿಯಿತು.
ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ಸಮಸ್ಯೆಯೇ ಪ್ರಮುಖವಾಗಿ ಪ್ರತಿಧ್ವನಿಸಿತು. ಗ್ರಾಮದಲ್ಲಿ ನೀರಿನ ಹಾಹಾಕಾರ ಉಂಟಾಗಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದರು. ಇದೇ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರ ಕಾರ್ಯವೈಖರಿ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು, ಪಿಡಿಒ ಅವರನ್ನು ತಕ್ಷಣ ವರ್ಗಾವಣೆ ಮಾಡಬೇಕು ಎಂದು ಪಟ್ಟು ಹಿಡಿದರು.
ಗ್ರಾಮಸ್ಥರ ಅಹವಾಲು ಆಲಿಸಿದ ಶಾಸಕರು, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಗ್ರಾಮದಲ್ಲಿನ ಪ್ರಮುಖ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಬೇಕಾದ ಪ್ರಜಾಸೇವಾ ಕಾರ್ಯಕ್ರಮವೇ ಗ್ರಾಮಸ್ಥರ ಪ್ರತಿಭಟನೆಗೆ ಸಾಕ್ಷಿಯಾಗಿದ್ದು, ಚಂದನಕೆರದಲ್ಲಿ ಕುಡಿಯುವ ನೀರಿನ ಸಮಸ್ಯೆ ಯಾವಾಗ ಬಗೆಹರಿಯಲಿದೆ ಎಂಬ ಪ್ರಶ್ನೆ ಎದುರಾಗಿದೆ.