ಚಿಂಚೋಳಿ | ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಿ: ನ್ಯಾಯಾಧೀಶ ಅನಿಲ್ ಶೆಕ್ಕಣ್ಣವರ್
ಚಿಂಚೋಳಿ : "ಗಿಡ ಬೆಳೆಸಿ, ಪರಿಸರ ಉಳಿಸಿ" ಎಂಬ ಧ್ಯೇಯವಾಕ್ಯದೊಂದಿಗೆ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅನಿಲ್ ಶೆಕ್ಕಣ್ಣವರ್ ಹೇಳಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು-ನೆರವು ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪರಿಸರದ ಸಮತೋಲನ ಕಾಪಾಡುವುದು ಇಂದಿನ ಅಗತ್ಯವಾಗಿದ್ದು, ಹಸಿರು ಪರಿಸರ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ನಾಗರಿಕನು ತನ್ನ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು. ಪರಿಸರ ಸಂರಕ್ಷಣೆ ಕೇವಲ ಸರ್ಕಾರದ ಹೊಣೆಗಾರಿಕೆಯಲ್ಲ, ಪ್ರತಿಯೊಬ್ಬರ ಕಾನೂನಾತ್ಮಕ ಹಾಗೂ ನೈತಿಕ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗದೆ, ಪರಿಸರದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಸಂಕಲ್ಪವನ್ನು ಬೆಳೆಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಶಶಿಕಾಂತ್, ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನಿಲ್ ಚವಾಣ್, ವಲಯ ಅರಣ್ಯಾಧಿಕಾರಿಗಳಾದ ಜಗನ್ನಾಥ್ ಕೊರಳ್ಳಿ, ಹಣಮಂತ ಹಿರೇಮನಿ, ವೀರಭದ್ರ, ಸಂಜು ಕುಮಾರ್ ಮೇತ್ರೆ, ಹನುಮಂತ್, ಸೂರ್ಯಕಾಂತ್ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ, ವಕೀಲರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.