ಚಿಂಚೋಳಿ | ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಕಲಬುರಗಿ: ಸಾಲದ ಬಾಧೆ ಹಾಗೂ ಬರಗಾಲದಿಂದ ಬೆಳೆ ನಷ್ಟವಾಗುವ ಆತಂಕದಿಂದ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕನಕಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅನಿಲಕುಮಾರ ಶಿವುರಾಯ ಮದನಕರ್ (38) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ತಮ್ಮ ಸರ್ವೆ ನಂ. 194/4ರಲ್ಲಿನ 3 ಎಕರೆ 20 ಗುಂಟೆ ಜಮೀನಿನಲ್ಲಿ ತೊಗರಿ ಬೆಳೆದಿದ್ದರು. ಆದರೆ, ತೀವ್ರ ಬಿಸಿಲಿನ ಪರಿಣಾಮ ಉತ್ತಮವಾಗಿ ಬೆಳೆದಿದ್ದ ತೊಗರಿ ಬೆಳೆ ಒಣಗಲಾರಂಭಿಸಿದ್ದು, ಇದರಿಂದ ಅವರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು ಎನ್ನಲಾಗಿದೆ.
ಸಾಲದ ಹೊರೆ ಹಾಗೂ ಬರಗಾಲದ ಹಿನ್ನೆಲೆಯಲ್ಲಿ ಬೆಳೆ ಹಾನಿಯಾಗುವ ಆತಂಕದಿಂದ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೃತರು ಪತ್ನಿ ಸಭಿತಾ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ.
ರೈತ ಕುಟುಂಬದ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಬೆಳೆ ವಿಮೆ ಜಾರಿಗೊಳಿಸಿ ಸೂಕ್ತ ಪರಿಹಾರ ನೀಡಬೇಕು. ರಾಜ್ಯದಲ್ಲಿ ಸಮಗ್ರವಾಗಿ ಬೆಳೆ ವಿಮೆ ಯೋಜನೆ ಜಾರಿಗೊಳಿಸುವ ಮೂಲಕ ಬೆಳೆ ನಷ್ಟದ ಸಂದರ್ಭದಲ್ಲಿ ರೈತರಿಗೆ ಆರ್ಥಿಕ ಭದ್ರತೆ ಒದಗಿಸಬೇಕು ಎಂದು ಪ್ರಾಂತ ರೈತ ಸಂಘದ ಅಧ್ಯಕ್ಷ ಶರಣಬಸಪ್ಪ ಮಮಶೇಟಿ ಆಗ್ರಹಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.