Chincholi | ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ಚಿಂಚೋಳಿ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿಂಚೋಳಿ ತಾಲೂಕು ಘಟಕದ ವತಿಯಿಂದ ಸೇವಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಪ್ರಯುಕ್ತ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಮಾನವೀಯ ಸೇವೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರಾಠೋಡ್, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ವೀರೇಂದ್ರ ಪಾಟೀಲ್, ತಾಲೂಕು ಯೋಜನಾಧಿಕಾರಿ ಕೇಶವ ಡಿ.ಎಸ್., ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷೆ ನರಸಮ್ಮ ಅವಂಟಿ ಹಾಗೂ ಸದಸ್ಯ ಸುರೇಶ್ ದೇಶಪಾಂಡೆ ಅವರು ರೋಗಿಗಳಿಗೆ ಹಣ್ಣುಹಂಪಲು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಕೇಶವ ಡಿ.ಎಸ್., ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನವನ್ನು ಸೇವಾ ದಿನವನ್ನಾಗಿ ಆಚರಿಸುವ ಉದ್ದೇಶದಿಂದ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಗಿದೆ ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರಾಠೋಡ್ ಮಾತನಾಡಿ, ಜನ್ಮದಿನದ ಪ್ರಯುಕ್ತ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿರುವುದು ಶ್ಲಾಘನೀಯ ಮಾನವೀಯ ಕಾರ್ಯವಾಗಿದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಇಂತಹ ಸೇವಾ ಕಾರ್ಯಗಳು ಸಂತೋಷ ಹಾಗೂ ಆತ್ಮಸ್ಥೈರ್ಯ ತುಂಬುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಚೇರಿಯ ವಿಮಾ ಸಮನ್ವಯಾಧಿಕಾರಿ ನಾಗರಾಜ್, ವಲಯ ಮೇಲ್ವಿಚಾರಕರಾದ ರಂಗಮ್ಮ, ಜಗದೇವಿ, ಕಚೇರಿ ಸಿಬ್ಬಂದಿ, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.