ಚಿಂಚೋಳಿ: ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಪ್ರತಿಭಟನೆ
ಕಲಬುರಗಿ: ಯುನಿಟಿ ಆಫ್ ಮೂಲನಿವಾಸಿ ಬಹುಜನ ಸಂಘಟನೆ ಹಾಗೂ ಮೂಲನಿವಾಸಿ ವಾಹನ ಚಾಲಕರ ಸಂಘದ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಚಿಂಚೋಳಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಬಸ್ ಡಿಪೋ ಕ್ರಾಸ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಪ್ರತಿಭಟನಾಕಾರರು ಹೂವಿನಬಾವಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕು, ಕೆಟ್ಟುಹೋಗಿರುವ ಹೈಮಾಸ್ಟ್ ವಿದ್ಯುತ್ ದೀಪಗಳನ್ನು ಬದಲಾಯಿಸಬೇಕು, ಪರಿಶಿಷ್ಟ ಜಾತಿ ಬಡಾವಣೆಗಳಿಗೆ ಪ್ರತ್ಯೇಕ ಪಂಪ್ ಆಪರೇಟರ್ ನೇಮಕ ಮಾಡಬೇಕು, ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು, ಬೀದಿ ದೀಪಗಳನ್ನು ಅಳವಡಿಸಬೇಕು ಹಾಗೂ ಶಾಲೆಗಳಿಗೆ ಹೆಚ್ಚಿನ ಅತಿಥಿ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಗ್ರಾಮದ ಎಲ್ಲಾ ವಾರ್ಡ್‌ಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಇದೇ ವೇಳೆ ಅಬಕಾರಿ ಇಲಾಖೆಗೆ ಸಲ್ಲಿಸಿದ ಮನವಿಯಲ್ಲಿ ತಾಜಲಪೂರ ಗ್ರಾಮದಲ್ಲಿ ಕೆಲವು ಕಿರಾಣಿ ಅಂಗಡಿಗಳು ಹಾಗೂ ಹೋಟೆಲ್‌ಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿದರು. ಇದರಿಂದ ಗ್ರಾಮದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಶಾಲಾ ಮಕ್ಕಳ ಮೇಲೂ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟಬೇಕು ಹಾಗೂ ತಾಜಲಪೂರ ಗ್ರಾಮವನ್ನು ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ಬಳಿಕ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಅಬಕಾರಿ ವೃತ್ತ ನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸದಿದ್ದಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮಾರುತಿ ಗಂಜಗಿರಿ, ಮೋಹನ್ ಐನಾಪೂರ, ಅಮರನಾಥ ಮೇತ್ರಿ, ಕಮಲಾಕರ ಕೊರವಿ, ಮಾರುತಿ ಜಾಧವ್, ಸಿದ್ದು ರಂಗನೂರು, ನೀಲಗಂಗಾ, ಶೃತಿ, ಮೈಬೂಬ್ ಸವಾರಿ, ಚಂದ ಮಾರ್ನಳ್ಳಿ, ನಯೀಂ ಪಟೇಲ್, ಮಹಾನಂದ, ರತ್ನಮ್ಮ, ಕಸ್ತೂರಿಬಾಯಿ, ಸೋನಮ್ಮ, ಮಂಜುಳ, ವೈಜಿನಾಥ, ರಂಜಿತ್, ಜಗನ್ನಾಥ್ ರೆಡ್ಡಿ, ಬಬ್ಬು ರೆಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.