ಚಿಂಚೋಳಿ: ರೈತರ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಹಾಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ವತಿಯಿಂದ ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಜಡಿದು, ಚಿಂಚೋಳಿ–ತಾಂಡೂರ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡರು, ದೇಶದ ಬೆನ್ನೆಲುಬಾಗಿರುವ ರೈತರು ಹಗಲಿರುಳು ಶ್ರಮಿಸಿ ಬೆಳೆಗಳನ್ನು ಬೆಳೆಯುತ್ತಿದ್ದರೂ, ತಮ್ಮ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ, ಕೃಷಿ ಕಾರ್ಮಿಕರ ಕೂಲಿ, ವಿದ್ಯುತ್, ನೀರಾವರಿ ಹಾಗೂ ಇಂಧನದ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಆದರೆ, ರೈತರು ಬೆಳೆದ ಬೆಳೆಗಳಿಗೆ ಉತ್ಪಾದನಾ ವೆಚ್ಚಕ್ಕೆ ಅನುಗುಣವಾದ ಬೆಲೆ ಸಿಗುತ್ತಿಲ್ಲ. ಇದರಿಂದ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟದ ಜೀವನ ನಡೆಸುವಂತಾಗಿದೆ. ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವಂತೆ ಮಾಡುವುದರ ಜತೆಗೆ ಕೃಷಿ ಕ್ಷೇತ್ರವನ್ನು ಉಳಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ರೈತರ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ ಎಂದು ಮುಖಂಡರು ತಿಳಿಸಿದರು.

ರೈತರ ಉಳಿವು, ಕೃಷಿಯ ರಕ್ಷಣೆ ಹಾಗೂ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ದೊರಕಿಸುವ ಉದ್ದೇಶದಿಂದ ಈ ಹೋರಾಟ ನಡೆಸಲಾಗುತ್ತಿದೆ. ಜಿಲ್ಲೆಯ ರೈತರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಹೋರಾಟಕ್ಕೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ವೀರಣ್ಣ ಗಂಗಾಣಿ, ರಾಜಕುಮಾರ್ ತಳವಾರ್, ಗೋಪಾಲ ಗಾರಂಪಳ್ಳಿ, ಕೆ.ಎಂ. ಬಾರಿ, ಭೀಮಶೇಡಟ್ಟಿ ಮುರಡಾ, ನಂದಕುಮಾರ ಪಾಟೀಲ, ಶ್ರೀಹರಿ ಬೈನೂರ್, ಸಂತೋಷ ರೆಡ್ಡಿ, ಮಲ್ಲಿಕಾರ್ಜುನ ಹೂಗಾರ್, ಶರಣು ಮಡಿವಾಳ, ಸಂಗಮೇಶ್ ಸೋಮನಿಂಗದಳ್ಳಿ, ಬಸವರಾಜ ಪಾಟೀಲ, ಗುರುನಾಥ ತಳವಾರ್, ವಿಠಲ ಪೂಜಾರಿ ಸೇರಿದಂತೆ ರೈತ ಸಂಘಟನೆಗಳ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor