ಚಿಂಚೋಳಿ: ಬಸವಣ್ಣನವರ ಕುರಿತು ಅವಹೇಳನಕಾರಿ ವಿಚಾರಗಳನ್ನು ಹರಡಲಾಗಿದೆ ಎಂದು ಆರೋಪಿಸಿ, ಸಮಾಜದ ಭಾವನೆಗಳಿಗೆ ಧಕ್ಕೆ ತಂದಿರುವ ‘ಬಸವ ಮಂಟಪ’ ಕೃತಿಯನ್ನು ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಕೃತಿಯ ಲೇಖಕ ರವಿ ಹಂಜ್ ಅವರನ್ನು ಬಂಧಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಹಿಂದುಳಿದ ಜಾತಿ ವರ್ಗಗಳ ಒಕ್ಕೂಟದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಬಳಿಕ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಒಕ್ಕೂಟದ ತಾಲೂಕು ಅಧ್ಯಕ್ಷ ಹಣಮಂತ ಕೆ. ಪೂಜಾರಿ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ, ಜಾತಿ, ವರ್ಣ ಹಾಗೂ ಲಿಂಗಭೇದ ಮೀರಿ ಸಮಾನತೆಯ ಸಂದೇಶ ಸಾರಿದ ಮತ್ತು ‘ಕಾಯಕವೇ ಕೈಲಾಸ’ ಎಂಬ ತತ್ವದ ಮೂಲಕ ದುಡಿಮೆಗೆ ಗೌರವ ತಂದುಕೊಟ್ಟ ಬಸವಣ್ಣನವರ ಕುರಿತು ಆಧಾರರಹಿತ ವಿಚಾರಗಳನ್ನು ಹರಡುವುದು ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಮಾಡಿದ ಅವಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಬಸವಣ್ಣನವರ ಚಾರಿತ್ರ್ಯಕ್ಕೆ ಧಕ್ಕೆ ತರುವ ಹಾಗೂ ಲಿಂಗಾಯತ-ವೀರಶೈವ ಸಮಾಜ ಸೇರಿದಂತೆ ವಿವಿಧ ಸಮುದಾಯಗಳ ನಡುವೆ ಒಡಕು ಮೂಡಿಸುವ ಪ್ರಯತ್ನಗಳನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಕೃತಿಗಳ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಅವಹೇಳನಕಾರಿ ಕೃತಿಗಳು ಪ್ರಕಟವಾಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಕೆ.ಎಂ. ಬಾರಿ, ರವಿಶಂಕರ್ ಮುತಂಗಿ, ಗೋಪಾಲ್ ಎಂ.ಪಿ., ಶಂಕರ ರಾಠೋಡ, ಶ್ರೀಮಂತ ಬಿ. ಕಟ್ಟಿಮನಿ, ವಕೀಲರಾದ ರಾಜೇಂದ್ರ ಕುಮಾರ್ ವರ್ಮಾ, ಚೇತನ್ ಸುಲೇಪೇಟ, ಮೋಹನ ಐನಾಪುರ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ