ದೇವಿಂದ್ರ ಎಂ.ಅರಣಕಲ್

ಚಿತ್ತಾಪುರ: ದಲಿತರು, ನೀಲಿ ಶಾಲು ಹಾಗೂ ದಲಿತ ಸಂಘಟನೆಗಳ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಯನ್ನು ಖಂಡಿಸಿ, ಅವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ದಲಿತ ಮುಖಂಡ ಮಲ್ಲಿಕಾರ್ಜುನ ಕಾಳಗಿ ಮತ್ತು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ತಾಲೂಕು ಅಧ್ಯಕ್ಷ ದೇವಿಂದ್ರ ಎಂ.ಅರಣಕಲ್ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಅವರು ದಲಿತ ಸಮುದಾಯ ಮತ್ತು ದಲಿತ ಸಂಘಟನೆಗಳ ಕುರಿತು ಲಘುವಾಗಿ ಹಾಗೂ ನಿಂದನೀಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದರು.

“ಪ್ರತಾಪ್ ಸಿಂಹ ಅವರಿಗೆ ನೀಲಿ ಶಾಲು ಕಂಡರೆ ಭಯವಾಗುತ್ತಿದೆ. ಸಮಾಜದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಮಲ್ಲಿಕಾರ್ಜುನ ಕಾಳಗಿ ಆರೋಪಿಸಿದರು.

ದಲಿತರಿಗೆ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಓದಬೇಕು ಎಂದು ಸಲಹೆ ನೀಡಿರುವ ಪ್ರತಾಪ್ ಸಿಂಹ ಅವರು, ಸ್ವತಃ ಅಂಬೇಡ್ಕರ್ ಅವರ ವಿಚಾರಧಾರೆಯನ್ನು ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂದು ಅವರು ಟೀಕಿಸಿದರು.

“ಅಂಬೇಡ್ಕರ್ ಅವರನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡಿದ್ದರೆ ದಲಿತರು, ದಲಿತ ಸಂಘಟನೆಗಳು ಹಾಗೂ ನೀಲಿ ಶಾಲಿನ ಕುರಿತು ಹಗುರವಾಗಿ ಮಾತನಾಡುತ್ತಿರಲಿಲ್ಲ” ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಾಪ್ ಸಿಂಹ ಅವರ ಹೇಳಿಕೆ ಸಮಾಜದಲ್ಲಿ ಅಸಮಾಧಾನ ಉಂಟುಮಾಡುವಂತಿದ್ದು, ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor