Chitapur | ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರದ ವಸತಿ ನಿಲಯಗಳಲ್ಲೇ ಅವ್ಯವಸ್ಥೆ : ಬಿಜೆಪಿ ಆರೋಪ
ಚಿತ್ತಾಪುರ: ಶಾಸಕ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಸ್ವಂತ ಕ್ಷೇತ್ರದಲ್ಲಿರುವ ವಸತಿ ನಿಲಯಗಳಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಆರೋಪಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆಯನ್ನು ಖಂಡಿಸಿ ವಿದ್ಯಾರ್ಥಿನಿಯರು ಗುರುವಾರ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಗೃಹ ಸಚಿವರ ಕ್ಷೇತ್ರದಲ್ಲೇ ಇಂತಹ ಅವ್ಯವಸ್ಥೆ ಇರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.
ವಸತಿ ನಿಲಯದಲ್ಲಿ ಸ್ನಾನ ಮಾಡಲು ಬಿಸಿನೀರು ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. 110 ಬಾಲಕಿಯರಿಗೆ ಕೇವಲ ಎರಡು ಶೌಚಾಲಯಗಳಿದ್ದು, ತಿಳಿನೀರಿನ ಸಾರು ಹಾಗೂ ಕಳಪೆ ಗುಣಮಟ್ಟದ ಆಹಾರ ಪೂರೈಸಲಾಗುತ್ತಿದೆ ಎಂದು ಆರೋಪಿಸಿದರು.
ಇತ್ತೀಚೆಗೆ ತಾಲೂಕಿನ ದಂಡೋತಿ ವಸತಿ ನಿಲಯ ಹಾಗೂ ಸೇಡಂ ಮತ್ತು ಅಫಜಲಪುರ ತಾಲೂಕಿನ ವಸತಿ ನಿಲಯಗಳಲ್ಲಿಯೂ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದಾರೆ. ವಸತಿ ನಿಲಯಗಳಲ್ಲಿ ಬಡಮಕ್ಕಳು ಶಿಕ್ಷಣ ಪಡೆಯುತ್ತಿದ್ದು, ಅಲ್ಲಿ ಮೂಲಸೌಕರ್ಯಗಳ ಕೊರತೆಯಿದ್ದರೆ ಅವರ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ ಮೂಲಸೌಕರ್ಯಗಳ ಕೊರತೆಯ ಜೊತೆಗೆ ಅಭಿವೃದ್ಧಿಯೂ ಮರೀಚಿಕೆಯಾಗಿದೆ ಎಂದು ಕಿಡಿಕಾರಿದರು.
ಕಳೆದ ಮೂರು ವರ್ಷ ಆರು ತಿಂಗಳಿಂದ ಚಿತ್ತಾಪುರದಲ್ಲಿ ಕೆಡಿಪಿ ಸಭೆ ನಡೆಸದ ಸಚಿವ ಖರ್ಗೆ ಅವರಿಗೆ ಅಧಿಕಾರಿಗಳ ಮೇಲೆ ಹಿಡಿತವಿಲ್ಲದಂತಾಗಿದೆ. ಚಿತ್ತಾಪುರ ಅಭಿವೃದ್ಧಿ ಹೊಂದಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕಿರಣ ದೇಶಮುಖ ಹೇಳುತ್ತಾರೆ. ಅವರು ಚಿತ್ತಾಪುರಕ್ಕೆ ಬಂದು ಇಲ್ಲಿನ ರಸ್ತೆಗಳಲ್ಲಿ ಸಂಚರಿಸಿದರೆ ವಾಸ್ತವ ಸ್ಥಿತಿ ತಿಳಿಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಎಲ್ಲ ವಸತಿ ನಿಲಯಗಳಲ್ಲಿ ಸಮರ್ಪಕ ಶೌಚಾಲಯ, ಸ್ನಾನಕ್ಕೆ ಬಿಸಿನೀರು, ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರ ನೀಡಬೇಕು. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಿದರೆ ಬಿಜೆಪಿಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಚಂದ್ರಶೇಖರ ಅವಂಟಿ ಮಾತನಾಡಿ, ಶಾಸಕ ಪ್ರಿಯಾಂಕ್ ಖರ್ಗೆ ಗೃಹ ಸಚಿವರಾದ ಬಳಿಕ ಸ್ವಕ್ಷೇತ್ರ ಚಿತ್ತಾಪುರಕ್ಕೆ ಈವರೆಗೆ ಭೇಟಿ ನೀಡಿಲ್ಲ. ಕ್ಷೇತ್ರವನ್ನು ಕಗ್ಗತ್ತಲಲ್ಲಿ ಇಟ್ಟಿದ್ದಾರೆ ಎಂದು ಆರೋಪಿಸಿದರು. ಗೃಹ ಸಚಿವರ ತವರು ಜಿಲ್ಲೆಯಲ್ಲಿ ಹಲವು ಪೊಲೀಸ್ ಸಿಬ್ಬಂದಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ. ಗೃಹ ಇಲಾಖೆಯ ಮೇಲೆ ಖರ್ಗೆ ಅವರಿಗೆ ಹಿಡಿತವಿಲ್ಲ ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸೂರ್, ಪುರಸಭೆ ಮಾಜಿ ಸದಸ್ಯರಾದ ಸುರೇಶ ಬೆನಕನಳ್ಳಿ, ರಮೇಶ ಬೊಮ್ಮನಳ್ಳಿ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗರಾಜ ಹೂಗಾರ ಹಾಗೂ ವಕ್ತಾರ ಶಿವರಾವ ಚವ್ಹಾಣ ಉಪಸ್ಥಿತರಿದ್ದರು.