Chitapur | ಪರಿಸರ ಉಳಿಸಿದರೆ ನಮ್ಮ ಬದುಕೂ ಸುರಕ್ಷಿತ : ದೇವಿಂದ್ರ ಅರಣಕಲ್
ಚಿತ್ತಾಪುರ: ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂಬುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ದೇವಿಂದ್ರ ಅರಣಕಲ್ ಹೇಳಿದರು.
ಪಟ್ಟಣದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಕಚೇರಿ ಆವರಣದಲ್ಲಿ ಕೇಂದ್ರ ಸಹಕಾರ ಸಚಿವಾಲಯದ ಐದು ವರ್ಷಗಳ ಸಂಭ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಸಹಕಾರ ಸಪ್ತಾಹ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಹಕಾರ ಸಪ್ತಾಹದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪರಿಸರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ, ಉತ್ತಮ ಆರೋಗ್ಯಕರ ಜೀವನಕ್ಕಾಗಿ ಸ್ವಚ್ಛ ಮತ್ತು ಹಸಿರು ಪರಿಸರ ಅತ್ಯಗತ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಪ್ರಕೃತಿಯ ಸಂರಕ್ಷಣೆಗೆ ತಮ್ಮ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಕೃಷಿ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾನಕರೆ ಮಾತನಾಡಿ, ಗಿಡಮರಗಳನ್ನು ಉಳಿಸಿ ಬೆಳೆಸಿದರೆ ಉತ್ತಮ ಮಳೆಯಾಗಿ ಉತ್ತಮ ಬೆಳೆ ದೊರೆಯುತ್ತದೆ. ಇದರಿಂದ ರೈತರ ಬದುಕು ಸಮೃದ್ಧವಾಗುತ್ತದೆ. ಹೀಗಾಗಿ ಸಸಿ ನೆಡುವುದರ ಜೊತೆಗೆ ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನೂ ಪ್ರತಿಯೊಬ್ಬರೂ ವಹಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅಶೋಕ ಹರನಾಳ ವಾಡಿ, ನಿರ್ದೇಶಕ ರಾಚಣ್ಣ ಬೊಮ್ಮನಳ್ಳಿ, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ರೈತ ಸಂಘದ ಅಧ್ಯಕ್ಷ ಶಾಮರಾಯ ಸಂಗಾವಿ, ಮುಖಂಡರಾದ ಶಿವಮೂರ್ತಿ ಯರಗಲ್, ರಮೇಶ ಕಟ್ಟಿಮನಿ, ನಾಗೇಂದ್ರ ಬುರ್ಲಿ, ಬಸವರಾಜ ಚಿನ್ನಮಳ್ಳಿ, ಸಿದ್ದು ಟೈಪಿಸ್ಟ್, ಕಾರ್ಯದರ್ಶಿ ಸಂಗನಬಸವ ಸೇರಿದಂತೆ ಇತರರು ಇದ್ದರು.