×
Ad

Chitapur | ದಂಡೋತಿ ವಸತಿ ಶಾಲೆಯ ಘಟನೆಗೆ ರಾಜಕೀಯ ಬೇಡ: ಸಾಬಣ್ಣ ಭರಾಟೆ ತಿರುಗೇಟು

Update: 2026-07-12 18:38 IST

ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅರೆಬೆಂದ ಅನ್ನ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ಅಧಿಕಾರಿಗಳು ತಕ್ಷಣ ತಾಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಿದ್ದರಿಂದ ಎಲ್ಲ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಾಬಣ್ಣ ಭರಾಟೆ ದಂಡೋತಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯನ್ನು ಆಡಳಿತದ ವೈಫಲ್ಯ ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಆರೋಪಿಸಿರುವುದು ಸರಿಯಲ್ಲ. ಪ್ರತಿಯೊಂದು ವಿಷಯದಲ್ಲೂ ರಾಜಕೀಯ ಮಾಡುವುದನ್ನು ಬಿಡಬೇಕು ಎಂದು ಕಿವಿಮಾತು ಹೇಳಿದರು.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಜನರ ನಡುವೆ ಇರುವ ಜನನಾಯಕರಾಗಿದ್ದು, ವಿದ್ಯಾರ್ಥಿಗಳು ಅಸ್ವಸ್ಥಗೊಂಡ ವಿಷಯ ತಿಳಿಯುತ್ತಿದ್ದಂತೆಯೇ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು. ಅದರಂತೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಶೀಘ್ರ ಕ್ರಮ ಕೈಗೊಂಡ ಪರಿಣಾಮ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ ಎಂದು ಹೇಳಿದರು.

ಘಟನೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ಸರಿಯಲ್ಲ. ಈ ಪ್ರಕರಣಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದು, ಎಲ್ಲರಿಗೂ ಸೂಕ್ತ ಚಿಕಿತ್ಸೆ ಒದಗಿಸಲಾಗಿದೆ ಎಂದು ಸಾಬಣ್ಣ ಭರಾಟೆ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News