ಚಿತ್ತಾಪುರ | ನೀಟ್ ಅಕ್ರಮ ಪ್ರಕರಣದಲ್ಲಿ 13 ಮಂದಿ ಬಂಧನ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಕ್ರಮ: ಆರ್. ರುದ್ರಯ್ಯ

"ಸಿಜೆಪಿ ಹೋರಾಟ ರಾಜಕೀಯ ಪ್ರೇರಿತ"

Update: 2026-07-24 20:57 IST

ಚಿತ್ತಾಪುರ: ನೀಟ್ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 13 ಮಂದಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ತ್ವರಿತ ನ್ಯಾಯಾಲಯ ಸ್ಥಾಪಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಆರ್. ರುದ್ರಯ್ಯ ಹೇಳಿದರು.

ಪಟ್ಟಣದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದನೀಯ. ಆದರೆ ಈ ವಿಚಾರವನ್ನು ಮುಂದಿಟ್ಟುಕೊಂಡು ಸಿಜೆಪಿ ನಡೆಸುತ್ತಿರುವ ಹೋರಾಟದಲ್ಲಿ ಕಾಂಗ್ರೆಸ್ ಹಾಗೂ ಇತರ ಸಂಘಟನೆಗಳು ಭಾಗವಹಿಸಿ ಪ್ರತಿಭಟನೆಯ ದಿಕ್ಕನ್ನೇ ತಪ್ಪಿಸಿ ಅಶಾಂತಿಯ ವಾತಾವರಣ ನಿರ್ಮಾಣ ಮಾಡಿವೆ ಎಂದು ಆರೋಪಿಸಿದರು.

ಯಾವುದೇ ಘಟನೆಯ ವಿರುದ್ಧ ನ್ಯಾಯಯುತವಾಗಿ ಹೋರಾಟ ನಡೆಸುವುದು ಸರಿಯೇ ಹೊರತು, ಸಂಬಂಧಿತ ಸಚಿವರ ರಾಜೀನಾಮೆಯಿಂದ ಎಲ್ಲ ಸಮಸ್ಯೆಗಳೂ ಬಗೆಹರಿಯುವುದಿಲ್ಲ ಎಂದು ಅವರು ಹೇಳಿದರು. ಕಲಬುರಗಿ ಜಿಲ್ಲಾ ಕೇಂದ್ರ ಕಾರಾಗೃಹದಿಂದ ಮೂವರು ಆರೋಪಿಗಳು ಪರಾರಿಯಾದ ಸಂದರ್ಭದಲ್ಲಿ ಗೃಹ ಸಚಿವರು ರಾಜೀನಾಮೆ ನೀಡಿದರೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ರಾಜ್ಯದಲ್ಲಿ ಶಿಕ್ಷಣ ಸಚಿವರಾಗಿದ್ದ ಕಿಮ್ಮನೆ ರತ್ನಾಕರ್ ಅವರ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆ ಮೂರು ಬಾರಿ ಸೋರಿಕೆಯಾಗಿತ್ತು. ಆಗ ಇಂತಹ ಪ್ರತಿಭಟನೆಗಳು ನಡೆದಿರಲಿಲ್ಲ. ಈಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸುವುದು ರಾಜಕೀಯ ಪ್ರೇರಿತವಾಗಿದೆ ಎಂದು ಟೀಕಿಸಿದರು.

ಚಿತ್ತಾಪುರ ಸೇರಿದಂತೆ ಜಿಲ್ಲೆಯಲ್ಲಿ ಪ್ರಜಾಪ್ರಭುತ್ವದ ಹೆಸರಿನಲ್ಲಿ ನಿರಂಕುಶ ಆಡಳಿತ ನಡೆಯುತ್ತಿದೆ. ಪ್ರಶ್ನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಬೆದರಿಕೆ ಹಾಕುವ ಕೆಲಸ ಸಚಿವ ಪ್ರಿಯಾಂಕ್ ಖರ್ಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಬರಗಾಲದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರ ಸಮಸ್ಯೆಗಳ ಬಗ್ಗೆ ಸರ್ಕಾರ ಅಗತ್ಯ ಗಮನ ಹರಿಸುತ್ತಿಲ್ಲ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಮೇಯರ್ ವಿಶಾಲ್ ದರ್ಗಿ, ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸುರಕ‌ರ್, ಪುರಸಭೆ ಮಾಜಿ ಸದಸ್ಯರಾದ ಶಾಮಣ್ಣ ಮೇಧಾ, ದಶರಥ ದೊಡ್ಡಮನಿ, ಬಿಜೆಪಿ ನಗರ ಯುವ ಅಧ್ಯಕ್ಷ ಸಂಗಮೇಶ ಪಾಟೀಲ, ಅಕ್ಕಮಹಾದೇವಿ, ರವಿ ಮದನಕ‌ರ್, ಬಂದೆಪ್ಪ ಕಟ್ಟಿಮನಿ ಸೇರಿದಂತೆ ಇತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News