ಚಿತ್ತಾಪುರ: ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ.2ರಂದು ಪ್ರತಿಭಟನೆ
ಶಾಮರಾಯ ಸಂಗಾವಿ
ಚಿತ್ತಾಪುರ: ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು, ರೈತರಿಗೆ ಬೆಳೆ ವಿಮೆ ಹಣ ಮಂಜೂರು ಮಾಡಬೇಕು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ವತಿಯಿಂದ ಸೆ.2ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ 11.30ಕ್ಕೆ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಲಾಡ್ಜಿಂಗ್ ಕ್ರಾಸ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬಳಿಕ ಧರಣಿ ನಡೆಸಲಾಗುವುದು. ಜಿಲ್ಲಾಧಿಕಾರಿಗಳು ಖುದ್ದಾಗಿ ಧರಣಿ ಸ್ಥಳಕ್ಕೆ ಆಗಮಿಸಿ ಮನವಿ ಪತ್ರ ಸ್ವೀಕರಿಸುವವರೆಗೆ ಸತ್ಯಾಗ್ರಹ ಮುಂದುವರಿಸಲಾಗುವುದು ಎಂದು ಸಂಘದ ತಾಲೂಕು ಅಧ್ಯಕ್ಷ ಶಾಮರಾಯ ಸಂಗಾವಿ ತಿಳಿಸಿದ್ದಾರೆ.
ತಾಲೂಕಿನ ಬಹುತೇಕ ಎಲ್ಲ ಗ್ರಾಮಗಳ ರೈತರು ಬೆಳೆ ವಿಮೆ ಮಾಡಿಸಿದ್ದಾರೆ. ಆದರೆ ಬೆರಳೆಣಿಕೆಯಷ್ಟು ಗ್ರಾಮಗಳ ರೈತರಿಗೆ ಮಾತ್ರ ಬೆಳೆ ವಿಮೆ ಮೊತ್ತ ಮಂಜೂರಾಗಿದೆ. ಇನ್ನೂ ಹಲವು ಗ್ರಾಮಗಳ ರೈತರಿಗೆ ವಿಮೆ ಹಣ ಪಾವತಿಯಾಗಿಲ್ಲ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕನ್ನು ಬರಪೀಡಿತ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು. ಬೆಳೆ ವಿಮೆ ಹಣವನ್ನು ಅರ್ಹ ಎಲ್ಲ ರೈತರ ಖಾತೆಗಳಿಗೆ ತಕ್ಷಣ ಜಮೆ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಇದಲ್ಲದೆ, ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಮೆಂಟ್ ಕಾರ್ಖಾನೆಗಳಿಂದ ಹೊರಬರುವ ಧೂಳು (ಡಸ್ಟ್) ಪರಿಸರ ಹಾಗೂ ಜನರ ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ಸೂಕ್ತ ಕ್ರಮ ಕೈಗೊಳ್ಳಲು ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಸಿಮೆಂಟ್ ಕಂಪನಿಗಳ ವ್ಯಾಪ್ತಿಗೆ ಒಳಪಡುವ ಎಲ್ಲ ಗ್ರಾಮಗಳಲ್ಲಿ ಕಂಪನಿಗಳ ಸಿಎಸ್‌ಆರ್ ನಿಧಿಯಡಿ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಸಿಮೆಂಟ್ ಕಾರ್ಖಾನೆಗಳಲ್ಲಿ ಉದ್ಯೋಗ ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಸಾರ್ವಜನಿಕರಿಗೆ ಮೊದಲ ಆದ್ಯತೆ ನೀಡುವಂತೆ ಕಂಪನಿಗಳಿಗೆ ನಿರ್ದೇಶನ ನೀಡಬೇಕು ಎಂದು ಸಂಘದ ಪದಾಧಿಕಾರಿಗಳಾದ ಅರ್ಜುನ ಎಂ. ಸಾಲಹಳ್ಳಿ (ಭಂಕಲಗಿ), ಐಲರೆಡ್ಡಿ ಪಾಟೀಲ (ಯರಗಲ್), ನಾಗರಾಜ ಹೂಗಾರ ಹಾಗೂ ಬಸವರಾಜ ಎಸ್. ಬಿರಾದಾರ ಆಗ್ರಹಿಸಿದ್ದಾರೆ.