ಚಿತ್ತಾಪುರ | ವಸತಿ ನಿಲಯದ ಸಮಸ್ಯೆಗಳಿಗೆ ಬೇಸತ್ತು ವಿದ್ಯಾರ್ಥಿನಿಯರಿಂದ ರಸ್ತೆ ತಡೆದು ಪ್ರತಿಭಟನೆ
ಚಿತ್ತಾಪುರ: ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ವಿವಿಧ ಸಮಸ್ಯೆಗಳಿಂದ ಬೇಸತ್ತ ವಿದ್ಯಾರ್ಥಿನಿಯರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ವಸತಿ ನಿಲಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ವ್ಯತ್ಯಯ, ಶೌಚಾಲಯಗಳ ಸ್ವಚ್ಛತೆಯ ಕೊರತೆ ಹಾಗೂ ನಿಗದಿತ ಸಮಯಕ್ಕೆ ಗುಣಮಟ್ಟದ ಊಟ ನೀಡದಿರುವುದು ಸೇರಿದಂತೆ ಹಲವು ಸಮಸ್ಯೆಗಳು ತಲೆದೋರಿವೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆತಿಲ್ಲ ಎಂದು ವಿದ್ಯಾರ್ಥಿನಿಯರು ಅಸಮಾಧಾನ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿಯರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ವಸತಿ ನಿಲಯದಲ್ಲಿನ ಕುಡಿಯುವ ನೀರು, ವಿದ್ಯುತ್, ಶೌಚಾಲಯ, ಸ್ವಚ್ಛತೆ ಹಾಗೂ ಊಟದ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿದರು.
ವಿದ್ಯಾರ್ಥಿನಿಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ರಾಜಕುಮಾರ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಆಲಿಸಿದರು. ಸಮಸ್ಯೆಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಿಪಿಐ ಎಸ್.ಸಿ. ಪಾಟೀಲ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ಪ್ರತಿಭಟನೆಯಲ್ಲಿ ವಸತಿ ನಿಲಯದ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.