ಕಲಬುರಗಿ: ಚುನಾವಣೆಯ ಮೂಲಕ ಅಧಿಕಾರ ಬದಲಾವಣೆ ಮಾಡುವ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡಿರುವ ಕಾಂಗ್ರೆಸ್, ಅರಾಜಕತೆ ಮತ್ತು ಅಶಾಂತಿ ಸೃಷ್ಟಿಸುವ ಮೂಲಕ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಪಿಸಿದರು.

ನಗರದ ಜಗತ್ ವೃತ್ತದಲ್ಲಿ ಬುಧವಾರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಅಭಿಯಾನದ ಪಾದಯಾತ್ರೆಗೆ ಚಾಲನೆ ನೀಡಿ, ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಸಾಂವಿಧಾನಿಕ ಸಂಸ್ಥೆಗಳ ರಕ್ಷಣೆಗೆ ಬಿಜೆಪಿ ಬದ್ಧವಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಿದೆ. ಇದೀಗ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದ ಹತಾಶೆಯಿಂದ ಚುನಾವಣಾ ಆಯೋಗ ಮತ್ತು ವಿದ್ಯುನ್ಮಾನ ಮತಯಂತ್ರಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುತ್ತಿದೆ ಎಂದು ಟೀಕಿಸಿದರು.

1975ರ ತುರ್ತು ಪರಿಸ್ಥಿತಿಯನ್ನು ಸ್ಮರಿಸಿದ ಅವರು, ಅಂದು ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿತ್ತು. ಯಾವುದೇ ಅಪರಾಧ ಮಾಡದ ಲಕ್ಷಾಂತರ ಜನರನ್ನು ಜೈಲಿಗೆ ಕಳುಹಿಸಲಾಗಿತ್ತು. ಆಗ ತಮಗೆ 24 ವರ್ಷ ವಯಸ್ಸಾಗಿದ್ದು, 18 ತಿಂಗಳು ಜೈಲಿನಲ್ಲಿ ಕಳೆದಿದ್ದಾಗಿ ತಿಳಿಸಿದರು. 1984ರಲ್ಲಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸಿಖ್ ಸಮುದಾಯದವರ ಹತ್ಯಾಕಾಂಡ ನಡೆದಿತ್ತು. ಇಂತಹ ಇತಿಹಾಸ ಹೊಂದಿರುವ ಕಾಂಗ್ರೆಸ್ ಈಗಲೂ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಮಾತನಾಡುತ್ತಿದೆ ಎಂದು ವ್ಯಂಗ್ಯವಾಡಿದರು.

ಚುನಾವಣೆಯಲ್ಲಿ ಸೋತಾಗಲೆಲ್ಲ ಕಾಂಗ್ರೆಸ್ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡುತ್ತಿದೆ. ನರೇಂದ್ರ ಮೋದಿ ಪ್ರಧಾನಿಯಾದ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರವೇ ಮುಖ್ಯ ಚುನಾವಣಾ ಆಯುಕ್ತರನ್ನು ನೇಮಕ ಮಾಡಿತ್ತು. ಅದೇ ಆಯೋಗದ ಅವಧಿಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಗುಜರಾತ್‌ನಲ್ಲಿಯೂ 2007 ಮತ್ತು 2012ರ ಚುನಾವಣೆಗಳಲ್ಲಿ ಕಾಂಗ್ರೆಸ್ ನೇಮಿಸಿದ್ದ ಚುನಾವಣಾ ಆಯುಕ್ತರ ಅವಧಿಯಲ್ಲೇ ನರೇಂದ್ರ ಮೋದಿ ಗೆಲುವು ಸಾಧಿಸಿದ್ದರು. ಹೀಗಿರುವಾಗ ಈಗ ಚುನಾವಣಾ ಆಯೋಗದ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನಿಸುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು.

ಹೈದರಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ವಿದೇಶಿ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಾಗ ಕಾಂಗ್ರೆಸ್ ನಾಯಕರು ಚಪ್ಪಾಳೆ ತಟ್ಟಿ ಬೆಂಬಲಿಸಿದ್ದಾರೆ ಎಂದು ಆರೋಪಿಸಿದರು. ದೇಶದ ಆಂತರಿಕ ರಾಜಕೀಯ ಭಿನ್ನಾಭಿಪ್ರಾಯಗಳನ್ನು ದೇಶದೊಳಗೇ ಬಗೆಹರಿಸಿಕೊಳ್ಳಬೇಕು. ವಿದೇಶಿ ವ್ಯಕ್ತಿಗಳನ್ನು ಕರೆಸಿ ಭಾರತದ ಪ್ರಜಾಪ್ರಭುತ್ವ ಮತ್ತು ಪ್ರಧಾನಿಯ ಗೌರವಕ್ಕೆ ಧಕ್ಕೆ ತರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣ ದೇಶದ ಭದ್ರತೆಗೂ ಅಪಾಯ ತಂದೊಡ್ಡಿದೆ ಎಂದು ಆರೋಪಿಸಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ದೂರಿದರು. ದೇಶದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಗಿಂತ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುವುದು ಕಾಂಗ್ರೆಸ್‌ನ ಧೋರಣೆಯಾಗಿದೆ ಎಂದು ಟೀಕಿಸಿದರು.

ಬೋಫೋರ್ಸ್, ಜಲಾಂತರ್ಗಾಮಿ ನೌಕೆ ಹಾಗೂ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಸೇರಿದಂತೆ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಹಲವು ಹಗರಣಗಳು ನಡೆದಿವೆ ಎಂದು ಆರೋಪಿಸಿದ ಅವರು, ರಕ್ಷಣಾ ಖರೀದಿಗಳಲ್ಲಿನ ಭ್ರಷ್ಟಾಚಾರ ದೇಶದ ಭದ್ರತೆಯೊಂದಿಗೆ ರಾಜಿ ಮಾಡಿಕೊಂಡಂತಾಗಿದೆ ಎಂದರು.

ಚುನಾಯಿತ ಸರ್ಕಾರಗಳನ್ನು ವಜಾಗೊಳಿಸುವ ಮೂಲಕ ಕಾಂಗ್ರೆಸ್ ಸಂವಿಧಾನದ ಆಶಯಗಳಿಗೆ ಧಕ್ಕೆ ತಂದಿದೆ. 1959ರಲ್ಲಿ ಕೇರಳದ ಚುನಾಯಿತ ಸರ್ಕಾರವನ್ನು ವಜಾಗೊಳಿಸಿದ್ದು ಹಾಗೂ ಇಂದಿರಾ ಗಾಂಧಿ ಆಡಳಿತದಲ್ಲಿ ಹಲವು ಬಾರಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದು ಇದಕ್ಕೆ ಉದಾಹರಣೆಗಳಾಗಿವೆ. ನ್ಯಾಯಾಂಗದ ಮೇಲೂ ಒತ್ತಡ ಹೇರಿದ ಇತಿಹಾಸ ಕಾಂಗ್ರೆಸ್‌ಗಿದೆ ಎಂದು ಆರೋಪಿಸಿದರು.

2014ಕ್ಕೂ ಮೊದಲು ಜಗತ್ತಿನ ಪ್ರಮುಖ ಆರ್ಥಿಕತೆಗಳ ಪಟ್ಟಿಯಲ್ಲಿ ಭಾರತ 10 ಅಥವಾ 11ನೇ ಸ್ಥಾನದಲ್ಲಿತ್ತು. ಇಂದು ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆದಿದೆ. ಮುಂದಿನ ಒಂದೆರಡು ವರ್ಷಗಳಲ್ಲಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಸಾಮರ್ಥ್ಯ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವ ಮತ್ತು ಪ್ರತಿಷ್ಠೆ ಹೆಚ್ಚಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿದರು. ಕಲಬುರಗಿ ಬಿಜೆಪಿ ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಶಾಸಕರಾದ ಬಸವರಾಜ ಮತ್ತಿಮೂಡ್, ಅವಿನಾಶ್ ಜಾಧವ್, ಶರಣು ಸಲಗರ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಬಿ.ಜಿ. ಪಾಟೀಲ್, ಮಾಜಿ ಸಂಸದರಾದ ಉಮೇಶ್ ಜಾಧವ್, ಭಗವಂತ ಖೂಬಾ, ದತ್ತಾತ್ರೇಯ ಪಾಟೀಲ್ ರೇವೂರ, ರಾಜಕುಮಾರ ಪಾಟೀಲ್ ತೇಲ್ಕೂರ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ ಬಾಗಲಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕನ್ನಡದಲ್ಲೇ ಸ್ವಾಗತ ಕೋರಿದ ರಾಜನಾಥ್ ಸಿಂಗ್ :

ಮೊದಲ ಬಾರಿಗೆ ಕಲಬುರಗಿಗೆ ಆಗಮಿಸಿದ ರಾಜನಾಥ್ ಸಿಂಗ್ ಅವರಿಗೆ ಬಿಜೆಪಿ ಮುಖಂಡರು ಶರಣಬಸವೇಶ್ವರರ ಪ್ರತಿಮೆಯನ್ನು ಕಾಣಿಕೆಯಾಗಿ ನೀಡಿದರು. ಇದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಕನ್ನಡದಲ್ಲೇ ಎಲ್ಲರಿಗೂ ಸ್ವಾಗತ ಕೋರಿದರು. ಕಲಬುರಗಿ ಬುದ್ಧ, ಜೈನ ಹಾಗೂ ಸನಾತನ ಪರಂಪರೆಯ ಐತಿಹಾಸಿಕ ನೆಲವಾಗಿದೆ. ಶರಣಬಸವೇಶ್ವರರಂತಹ ಮಹಾನ್ ಸಂತರು ಸಮಾಜಕ್ಕೆ ದಿಕ್ಕು ತೋರಿದ ಪುಣ್ಯಭೂಮಿ ಇದಾಗಿದೆ. ಕನ್ನಡ ಭಾಷೆಯ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದರು.

ಮತದಾನದ ಮೂಲಕವೇ ರಾಜಕೀಯ ಬದಲಾವಣೆ :

“ದೇಶದಲ್ಲಿ ರಾಜಕೀಯ ಬದಲಾವಣೆ ಆಗಬೇಕಾದರೆ ಅದು ಮತದಾನದ ಮೂಲಕವೇ ಆಗಬೇಕು. ಹಿಂಸಾಚಾರ, ಅರಾಜಕತೆ ಮತ್ತು ಅಶಾಂತಿಯ ಮೂಲಕ ಅಧಿಕಾರ ಬದಲಾವಣೆ ಸಾಧ್ಯವಿಲ್ಲ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ಕಾರ್ಯಕರ್ತರು ದೇಶದಾದ್ಯಂತ ಜನಜಾಗೃತಿ ಮೂಡಿಸಲಿದ್ದಾರೆ” ಎಂದು ರಾಜನಾಥ್ ಸಿಂಗ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ