ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ: ಬಿಎಸ್‌ಪಿ ಆಗ್ರಹ
ಕಲಬುರಗಿ: ಮಳೆಯ ಕೊರತೆಯಿಂದ ಜಿಲ್ಲೆಯ ವಿವಿಧೆಡೆ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆಗಳು ಒಣಗಿ ನಾಶವಾಗಿದ್ದು, ಸಮಗ್ರ ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆಯೆಂದು ಘೋಷಿಸಿ ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಬರ ಪರಿಹಾರ ನೀಡಬೇಕು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಕಲಬುರಗಿ ಜಿಲ್ಲಾ ಘಟಕ ಆಗ್ರಹಿಸಿದೆ.
ಈ ಕುರಿತು ಬಿಎಸ್‌ಪಿ ಜಿಲ್ಲಾಧ್ಯಕ್ಷ ಶಿವಯೋಗಿ ಡಿ. ಹಡಗಿಲಕರ್ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಅಲ್ಪ ಪ್ರಮಾಣದ ಮಳೆಯಾದ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕೈಗೊಂಡಿದ್ದರು. ಆದರೆ ನಂತರ ಮಳೆ ಕೈಕೊಟ್ಟ ಪರಿಣಾಮ ಬೆಳೆಗಳಿಗೆ ಅಗತ್ಯ ತೇವಾಂಶ ದೊರೆಯದೆ, ಹಲವು ಪ್ರದೇಶಗಳಲ್ಲಿ ಬೆಳೆಗಳು ಒಣಗಿ ನಾಶವಾಗಿವೆ. ಇದರಿಂದ ಬಿತ್ತನೆ, ಬೀಜ, ರಸಗೊಬ್ಬರ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಮಾಡಿದ ಖರ್ಚು ರೈತರಿಗೆ ಹೊರೆಯಾಗಿ ಪರಿಣಮಿಸಿದೆ ಎಂದು ತಿಳಿಸಿದ್ದಾರೆ.
ಮಳೆಯ ಅಭಾವದಿಂದ ಬಾವಿ, ಕೆರೆ ಹಾಗೂ ಕೊಳವೆ ಬಾವಿಗಳು ಬತ್ತುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಬರ ಪರಿಸ್ಥಿತಿಯಿಂದ ರೈತರು ಹಾಗೂ ಗ್ರಾಮೀಣ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.
ರಾಜ್ಯ ಸರ್ಕಾರ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದರೂ, ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿರುವ ಕಲಬುರಗಿ ಜಿಲ್ಲೆಯ ತಾಲೂಕುಗಳನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಜಿಲ್ಲೆಯ ರೈತರಿಗೆ ಮಾಡಿರುವ ಅನ್ಯಾಯವಾಗಿದೆ ಎಂದು ಬಿಎಸ್‌ಪಿ ಆರೋಪ ಮಾಡಿದರು.
ಕಲಬುರಗಿ ಜಿಲ್ಲೆಯ ಎಲ್ಲ ತಾಲೂಕುಗಳನ್ನು ತಕ್ಷಣ ಬರಪೀಡಿತವೆಂದು ಘೋಷಿಸಿ, ರೈತರಿಗೆ ಬೆಳೆವಿಮೆ ಹಾಗೂ ಬೆಳೆ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು. ಬೆಳೆ ನಷ್ಟದ ಪ್ರಮಾಣವನ್ನು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ, ಪ್ರತಿ ಎಕರೆಗೆ ₹30 ಸಾವಿರದಿಂದ ₹50 ಸಾವಿರದವರೆಗೆ ಪರಿಹಾರ ನೀಡಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.
ಜಾನುವಾರುಗಳಿಗೆ ಸಮರ್ಪಕ ಕುಡಿಯುವ ನೀರು ಹಾಗೂ ಮೇವಿನ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮೀಣ ಪ್ರದೇಶದ ಜನರಿಗೆ ವಿಬಿಜಿ ರಾಮ್‌ಜಿ ಯೋಜನೆಯಡಿ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಒದಗಿಸಿ, ಬರದಿಂದ ಉಂಟಾಗಿರುವ ಆರ್ಥಿಕ ಸಂಕಷ್ಟವನ್ನು ತಗ್ಗಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಯೋಜಕ ಹಾಗೂ ಕಲಬುರಗಿ ವಲಯ ಉಸ್ತುವಾರಿ ಎಲ್.ಆರ್. ಭೋಸಲೆ, ರಾಜ್ಯ ಕಾರ್ಯದರ್ಶಿಗಳಾದ ಡಾ. ಅನೀಲ ಟಂಗಳಿ, ಶಿಪ್ಪಣ್ಣ ಎಂ. ಕಿನ್ನೂರ, ರಾಜ್ಯ ಸಮಿತಿ ಸದಸ್ಯ ಮೈಲಾರಿ ಶೇಳಗಿ, ವಿವಿಧ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು ಹಾಗೂ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು.