×
Ad

ರಾಜ್ಯವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ಎನ್. ರವಿಕುಮಾರ್ ಆಗ್ರಹ

Update: 2026-07-03 21:43 IST

ಕಲಬುರಗಿ: ರಾಜ್ಯದಲ್ಲಿ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ರಾಜ್ಯವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಸರ್ವಪಕ್ಷಗಳ ಸಭೆ ನಡೆಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಒತ್ತಾಯಿಸಿದರು.

ನಗರದ ಐವನ್ ಶಾಹಿ ಅತಿಥಿ ಗೃಹದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಲವೆಡೆ ಮಳೆಯ ಅಭಾವದಿಂದ ಬಿತ್ತನೆ ಕಾರ್ಯ ಕುಂಠಿತಗೊಂಡಿದ್ದು, ರೈತರ ಸಮಸ್ಯೆಗಳನ್ನು ಆಲಿಸುವವರು ಇಲ್ಲದಂತಾಗಿದೆ ಎಂದು ಆರೋಪಿಸಿದರು.

ರಾಜ್ಯದ 140ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದ್ದು, 16 ಪ್ರಮುಖ ಜಲಾಶಯಗಳು ಬಹುತೇಕ ಬತ್ತಿವೆ. ಜನರು, ಜಾನುವಾರುಗಳು ಹಾಗೂ ಇತರೆ ಪ್ರಾಣಿಗಳಿಗೂ ಕುಡಿಯುವ ನೀರಿನ ಅಭಾವ ಎದುರಾಗಿದೆ. ಮುಂಗಾರು ಕೈಕೊಟ್ಟ ಪರಿಣಾಮ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿತ್ತನೆ ಕಾರ್ಯವೇ ನಡೆಯದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ರೈತರ ಸಮಸ್ಯೆ ಆಲಿಸಲು ಯಾವುದೇ ಸಚಿವರು ಗ್ರಾಮಗಳಿಗೆ ಭೇಟಿ ನೀಡುತ್ತಿಲ್ಲ ಎಂದು ಟೀಕಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಕುಡಿಯುವ ನೀರಿನ ಸಮಸ್ಯೆ ಮತ್ತು ರೈತರ ಸಂಕಷ್ಟದ ಬಗ್ಗೆ ಗಂಭೀರವಾಗಿ ಪರಿಗಣಿಸುತ್ತಿಲ್ಲ. ತಕ್ಷಣವೇ ಸರ್ವಪಕ್ಷಗಳ ಸಭೆ ಹಾಗೂ ಅಧಿಕಾರಿಗಳ ಸಭೆ ಕರೆದು ರಾಜ್ಯದ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಕುಡಿಯುವ ನೀರು ಮತ್ತು ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.

ಬಂಡೆ ಕುಸಿತ ಪ್ರಕರಣ: ಮೃತರ ಕುಟುಂಬಗಳಿಗೆ ಪರಿಹಾರ, ಉದ್ಯೋಗ ನೀಡಲಿ:

ಬೆಂಗಳೂರಿನ ಸಮೀಪ ಮಾದಾಪಟ್ಟಣ ಗ್ರಾಮದಲ್ಲಿ ಸಂಭವಿಸಿದ ಕಲ್ಲುಬಂಡೆ ಕುಸಿತ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿರುವುದು ಅತ್ಯಂತ ದುಃಖದ ಸಂಗತಿ. ಮೃತಪಟ್ಟವರಲ್ಲಿ ಯಾದಗಿರಿ ಜಿಲ್ಲೆಯ ಒಬ್ಬ ಕಾರ್ಮಿಕ ಕುಟುಂಬದ ಏಕೈಕ ಆಧಾರವಾಗಿದ್ದರು. ಆದ್ದರಿಂದ ಅವರ ಕುಟುಂಬಕ್ಕೆ 25 ಲಕ್ಷ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಬೇಕು. ಜೊತೆಗೆ ಮಧ್ಯಪ್ರದೇಶ ಮೂಲದ ಆರು ಕಾರ್ಮಿಕರ ಕುಟುಂಬಗಳಿಗೂ ತಲಾ 50 ಲಕ್ಷ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಗ್ಯಾರಂಟಿ ಯೋಜನೆಗಳಲ್ಲಿ ಅಕ್ರಮ ಆರೋಪ:

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿದ ಎನ್. ರವಿಕುಮಾರ್, ಸುಮಾರು 5 ಸಾವಿರ ಕೋಟಿ ಹಣದ ಲೆಕ್ಕ ಸ್ಪಷ್ಟವಾಗಿಲ್ಲ. 19 ಸಾವಿರ ಖಾತೆಗಳ ಹಣ ಒಂದೇ ಖಾತೆಗೆ ಜಮೆಯಾಗಿದ್ದು, 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಖಾತೆಗಳು ಬದಲಾಗಿವೆ ಎಂಬ ಮಾಹಿತಿ ಇದೆ. ಈ ಕುರಿತು ಸಂಬಂಧಪಟ್ಟ ಸಚಿವರ ವಿರುದ್ಧ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಮಾಧ್ಯಮ ಪ್ರಮುಖ ಆನಂದ ಪಾಟೀಲ ಹಾಗೂ ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ವೀರೇಂದ್ರ ಪಾಟೀಲ ರಾಯಕೋಡ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News