ಆಳಂದ ಕ್ಷೇತ್ರದ ರೈತರಿಗೆ ಬೆಳೆ ವಿಮೆ ನೀಡುವಂತೆ ಆಗ್ರಹ : ಸಚಿವ ಪ್ರಿಯಾಂಕ್ ಖರ್ಗೆಗೆ ಶಾಸಕ ಬಿ.ಆರ್. ಪಾಟೀಲ್ ಪತ್ರ
ಕಲಬುರಗಿ: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ಅರ್ಹ ರೈತರಿಗೆ ಬೆಳೆ ವಿಮೆ ಹಣ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿದ್ದು, ಈ ಕುರಿತು ತಕ್ಷಣ ತನಿಖೆ ನಡೆಸಿ ಎಲ್ಲ ಅರ್ಹ ರೈತರಿಗೆ ವಿಮೆ ಮೊತ್ತ ಪಾವತಿಸುವಂತೆ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಸರ್ಕಾರದ ಮೇಲೆ ನಂಬಿಕೆ ಇಟ್ಟು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ. ಆದರೆ, ಹಲವು ರೈತರಿಗೆ ಇನ್ನೂ ವಿಮೆ ಹಣ ಬಂದಿಲ್ಲ ಎಂದು ಶಾಸಕರಿಗೆ ದೂರುಗಳು ಬಂದಿವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಈ ಕುರಿತು ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಸ್ಪಷ್ಟ ಮಾಹಿತಿ ನೀಡದೆ, ರೈತರ ಬ್ಯಾಂಕ್ ಖಾತೆಗಳಿಗೆ ವಿಮೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆಳಂದ ತಾಲೂಕಿನ ಖಜೂರಿ, ದುತ್ತರಗಾಂವ್ ಸೇರಿದಂತೆ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳೆ ಕಟಾವು ಕುರಿತು ಅರ್ಹತೆ ಇಲ್ಲ ಎಂಬ ಕಾರಣ ನೀಡಲಾಗುತ್ತಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.
ಬರಗಾಲ ಹಾಗೂ ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ರೈತರು ವಿಮೆ ಹಣಕ್ಕಾಗಿ ಜಿಲ್ಲಾಧಿಕಾರಿ ಹಾಗೂ ಕೃಷಿ ಇಲಾಖೆ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆ ಉಂಟಾಗಿದ್ದರೆ, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಉದ್ಯೋಗ ಖಾತ್ರಿ ಕಾಮಗಾರಿ ಆರಂಭಿಸಲು ಆಗ್ರಹ;
ಪ್ರಸ್ತುತ ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ರೈತರು ಮತ್ತು ಕೃಷಿ ಕಾರ್ಮಿಕರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ VB-G RAM G ಉದ್ಯೋಗ ಖಾತ್ರಿ ಯೋಜನೆಯಡಿ ತುರ್ತು ಕಾಮಗಾರಿಗಳನ್ನು ಆರಂಭಿಸಬೇಕು ಅವರು ಮನವಿ ಮಾಡಿದ್ದಾರೆ.
ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸುವುದರಿಂದ ಗ್ರಾಮೀಣ ಪ್ರದೇಶದ ರೈತರು ಹಾಗೂ ಕೂಲಿ ಕಾರ್ಮಿಕರಿಗೆ ತಕ್ಷಣದ ಉದ್ಯೋಗ ಮತ್ತು ಆರ್ಥಿಕ ನೆರವು ದೊರೆಯಲಿದೆ. ಆದ್ದರಿಂದ ಬೆಳೆ ವಿಮೆ ಸಮಸ್ಯೆ ಬಗೆಹರಿಸುವುದರ ಜೊತೆಗೆ ಜಿಲ್ಲೆಯಾದ್ಯಂತ ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ಶೀಘ್ರ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ಶಾಸಕ ಬಿ.ಆರ್. ಪಾಟೀಲ್ ಆಗ್ರಹಿಸಿದ್ದಾರೆ.