ಆ.8ರಂದು ಕಲಬುರಗಿಯಲ್ಲಿ ಜಿಲ್ಲಾ ಮಟ್ಟದ ಅಥ್ಲೆಟಿಕ್ ಆಯ್ಕೆ ಪ್ರಕ್ರಿಯೆ
ಸಾಂದರ್ಭಿಕ ಚಿತ್ರ
ಕಲಬುರಗಿ, ಆ.5: ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯು ಕರ್ನಾಟಕ ಅಥ್ಲೆಟಿಕ್ ಸಂಸ್ಥೆಯ ಅಧಿಕೃತ ಮಾನ್ಯತೆಯೊಂದಿಗೆ ಬಾಲಕ ಹಾಗೂ ಬಾಲಕಿಯರಿಗಾಗಿ ಜಿಲ್ಲಾ ಮಟ್ಟದ ಅಥ್ಲೆಟಿಕ್ ಆಯ್ಕೆ ಪ್ರಕ್ರಿಯೆಯನ್ನು ಆಗಸ್ಟ್ 8ರಂದು ಬೆಳಿಗ್ಗೆ 9 ಗಂಟೆಯಿಂದ ನಗರದ ಚಂದಕಾಂತ ಪಾಟೀಲ ಕ್ರೀಡಾಂಗಣದ ಅಥ್ಲೆಟಿಕ್ ಟ್ರ್ಯಾಕ್‌ನಲ್ಲಿ ಆಯೋಜಿಸಿದೆ.
ಈ ಆಯ್ಕೆ ಪ್ರಕ್ರಿಯೆಯ ಮೂಲಕ ಯುವ ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್‌ಶಿಪ್–2026, ದಕ್ಷಿಣ ವಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಹಾಗೂ ಕಿರಿಯರ ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್‌ಶಿಪ್–2026ಕ್ಕೆ ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗುತ್ತದೆ.
14, 16, 18 ಹಾಗೂ 20 ವರ್ಷದೊಳಗಿನ ಬಾಲಕ–ಬಾಲಕಿಯರು ನಿಗದಿತ ವಯೋಮಿತಿಯಂತೆ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಪ್ರತಿ ಕ್ರೀಡಾಪಟುವಿಗೆ 300 ರೂ. ನೋಂದಣಿ ಶುಲ್ಕ ನಿಗದಿಪಡಿಸಲಾಗಿದ್ದು, ಆಗಸ್ಟ್ 7 ನೋಂದಣಿಗೆ ಕೊನೆಯ ದಿನವಾಗಿದೆ.
ಭಾರತೀಯ ಅಥ್ಲೆಟಿಕ್ ಫೆಡರೇಷನ್ (AFI) ನಿಯಮದಂತೆ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರತಿಯೊಬ್ಬ ಕ್ರೀಡಾಪಟುವೂ AFI UID ಹೊಂದಿರುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 8ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12.30ರವರೆಗೆ ಆಯ್ಕೆ ಸ್ಥಳದಲ್ಲಿಯೇ AFI UID ನೋಂದಣಿ ಸೌಲಭ್ಯ ಕಲ್ಪಿಸಲಾಗಿದೆ. ನೋಂದಣಿಗೆ ಆಧಾರ್ ಕಾರ್ಡ್ ಹಾಗೂ ಜನನ ಪ್ರಮಾಣಪತ್ರ ಕಡ್ಡಾಯವಾಗಿದೆ.
ಆಸಕ್ತ ಹಾಗೂ ಅರ್ಹ ಕ್ರೀಡಾಪಟುಗಳು ನಿಗದಿತ ಅವಧಿಯೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಕಾರ್ಯದರ್ಶಿ ಸಂತೋಷ ಭಾವಿಮನೆ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 98808 88390 ಸಂಖ್ಯೆಯನ್ನು ಸಂಪರ್ಕಿಸಬಹುದು.