ಜನ, ಜಾನುವಾರುಗಳಿಗೆ ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಲು ಡಾ.ಜಿ.ಪರಮೇಶ್ವರ್ ಸೂಚನೆ
"ಸೂಪರ್ ಎಲ್ ನಿನೋ ಸವಾಲು ಸಮರ್ಥವಾಗಿ ಎದುರಿಸಿ"
ಕಲಬುರಗಿ: ಸೂಪರ್ ಎಲ್ ನಿನೋ ಪರಿಣಾಮದಿಂದ ಉಂಟಾಗಿರುವ ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಿ, ಕಲ್ಯಾಣ ಕರ್ನಾಟಕ ಭಾಗದ ಜನರ ಜೀವನೋಪಾಯ ಹಾಗೂ ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಲಬುರಗಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ನಡೆದ ಕಲಬುರಗಿ ಕಂದಾಯ ವಿಭಾಗದ ವಿವಿಧ ಇಲಾಖೆಗಳ ಹಾಗೂ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಬರಗಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ನರೇಗಾ ಸೇರಿದಂತೆ ಲಭ್ಯ ಯೋಜನೆಗಳ ಮೂಲಕ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಕಲ್ಪಿಸಬೇಕು. ಜೊತೆಗೆ ಕುಡಿಯುವ ನೀರು, ಆಹಾರ, ಆರೋಗ್ಯ ಸೇವೆ ಹಾಗೂ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕಲಬುರಗಿ ಕಂದಾಯ ವಿಭಾಗದ 37 ತಾಲ್ಲೂಕುಗಳಲ್ಲಿ ಮಳೆ ಕೊರತೆ ಕಂಡುಬಂದಿದ್ದು, ಅದರಲ್ಲಿ 11 ತಾಲ್ಲೂಕುಗಳು ತೀವ್ರ ಮಳೆ ಅಭಾವದಿಂದ ಬಳಲುತ್ತಿವೆ. ಈವರೆಗೆ ಕೇವಲ ಶೇ.38ರಷ್ಟು ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಬಿತ್ತನೆ ಪ್ರಮಾಣ ಗಣನೀಯವಾಗಿ ಕುಸಿದಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಮಳೆ ಆರಂಭವಾದರೆ ಬೀಜ ಮತ್ತು ಗೊಬ್ಬರಗಳಿಗೆ ಏಕಾಏಕಿ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಸಿದ್ಧವಾಗಿರಬೇಕು. ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದು ಸೂಚಿಸಿದರು.
ವಿಭಾಗದಲ್ಲಿ 47 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರೂ, ಅದರ ವಾಸ್ತವ ಸ್ಥಿತಿಯನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸಬೇಕು. ಭಾಲ್ಕಿ, ಹುಮನಾಬಾದ್, ಚಿಟಗುಪ್ಪ, ಹುಲಸೂರು, ಯಾದಗಿರಿ ಹಾಗೂ ಗುರುಮಠಕಲ್ ತಾಲ್ಲೂಕುಗಳಲ್ಲಿ ಮೇವು ಕೊರತೆ ಇರುವುದರಿಂದ ತ್ವರಿತವಾಗಿ ಮೇವು ಬ್ಯಾಂಕ್ ಹಾಗೂ ಗೋಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಮಳೆ ಮಾಪನ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಕಡಿಮೆ ಮಳೆ ಮತ್ತು ಕಡಿಮೆ ವೆಚ್ಚದಲ್ಲಿ ಬೆಳೆಯಬಹುದಾದ ಬೆಳೆಗಳ ಬಗ್ಗೆ ರೈತರಿಗೆ ಕೃಷಿ ಇಲಾಖೆ ಜಾಗೃತಿ ಮೂಡಿಸಬೇಕು. ಜೊತೆಗೆ ಬರ ನಿರ್ವಹಣೆಗೆ ಪ್ರತಿ ತಾಲ್ಲೂಕಿಗೆ ನೇಮಕವಾಗಿರುವ ಹಿರಿಯ ಕೆಎಎಸ್ ಅಧಿಕಾರಿಗಳ ಸೇವೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಸೂಚಿಸಿದರು.