ಕಾಳಗಿ: ಪಟ್ಟಣದಲ್ಲಿ ಕುಡಿಯುವ ನೀರಿನ ಲಭ್ಯತೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿದ್ರಾಮೇಶ್ವರ ಶಾಖಾಪೂರ ಮನವಿ ಮಾಡಿದ್ದಾರೆ.

ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಕುಡಿಯುವ ನೀರು ಪೂರೈಸುವ ರೌದ್ರವತಿ ಹಳ್ಳದಲ್ಲಿ ಪ್ರಸಕ್ತ ಸಾಲಿನಲ್ಲಿ ಸಮರ್ಪಕ ಮಳೆಯಾಗದ ಕಾರಣ ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಹೀಗಾಗಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸುವ ಉದ್ದೇಶದಿಂದ ಒಂದು ದಿನ ಬಿಟ್ಟು ಒಂದು ದಿನ ಮಾತ್ರ ಕುಡಿಯುವ ನೀರು ಪೂರೈಸಲು ನಿರ್ಧರಿಸಲಾಗಿದೆ. ನೀರು ಸರಬರಾಜು ಮಾಡುವ ದಿನದಂದು ಕೇವಲ ಒಂದು ಗಂಟೆ ಮಾತ್ರ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ನಳದ ನೀರನ್ನು ಮಿತವಾಗಿ ಬಳಸಬೇಕು. ನೀರನ್ನು ಸಂಗ್ರಹಿಸುವಾಗಲೂ ಅಗತ್ಯಕ್ಕೆ ತಕ್ಕಷ್ಟು ಮಾತ್ರ ಸಂಗ್ರಹಿಸಿ, ಮರುಬಳಕೆಗೆ ಆದ್ಯತೆ ನೀಡಬೇಕು. ಎಲ್ಲ ವಾರ್ಡ್‌ಗಳಿಗೂ ಸಮರ್ಪಕವಾಗಿ ನೀರು ತಲುಪಲು ಪಟ್ಟಣ ಪಂಚಾಯಿತಿಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ನೀರಿನ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ :

ನೀರಿನ ಮಹತ್ವವನ್ನು ಅರಿತು ಸಾರ್ವಜನಿಕರು ಪಟ್ಟಣ ಪಂಚಾಯಿತಿಯೊಂದಿಗೆ ಕೈಜೋಡಿಸಬೇಕು. ನೀರಿನ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಾರ್ವಜನಿಕರ ಸಹಕಾರದಿಂದ ಮಾತ್ರ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯ ಎಂದು ಕಾಳಗಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸಾಲೀಯಾಬೇಗಂ ಎಂ. ಬಿಜಾಪೂರ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ