×
Ad

ಸಂವಿಧಾನ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ: ರಾಜರತ್ನ ಅಂಬೇಡ್ಕರ್

Update: 2026-05-19 19:06 IST

ಜೇವರ್ಗಿ: ದೇಶದ ಸಂವಿಧಾನವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ಸಾಮಾಜಿಕ ಚಿಂತಕ ರಾಜರತ್ನ ಅಂಬೇಡ್ಕರ್ ಹೇಳಿದರು.

ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ “ಅರಿವು ಉತ್ಸವ” ಕಾರ್ಯಕ್ರಮದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

“ಸಂವಿಧಾನ ಜಾರಿಯಾಗಿ ಕೇವಲ 75 ವರ್ಷಗಳಷ್ಟೇ ಆಗಿದ್ದರೂ, ಅದನ್ನು ಬದಲಾಯಿಸುವ ಹುನ್ನಾರಗಳು ನಡೆಯುತ್ತಿವೆ. ಮನುಸ್ಮೃತಿಯನ್ನು ಮತ್ತೆ ಜಾರಿಗೆ ತರಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ಹೇಳಿದರು.

ಕೇಂದ್ರ ಸರಕಾರ ಅಂಬೇಡ್ಕರ್ ಅವರ ಹೆಸರನ್ನು ಕೇವಲ ಸ್ಮರಿಸುವುದಲ್ಲದೆ, ದೇಶದ ಜನರಿಗೆ ಉತ್ತಮ ಶಿಕ್ಷಣ ಒದಗಿಸಿ ಅವರನ್ನು ಬುದ್ಧಿವಂತರನ್ನಾಗಿಸಬೇಕು. ದಲಿತರನ್ನು ಶಿಕ್ಷಣದಿಂದ ದೂರವಿಡುವ ಪ್ರಯತ್ನಗಳು ನಡೆಯುತ್ತಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮೈಸೂರಿನ ಉರಿಲಿಂಗ ಪೆದ್ದಿ ಸಂಸ್ಥಾನ ಮಠದ ಪೀಠಾಧಿಪತಿ ಡಾ. ಜ್ಞಾನಪ್ರಕಾಶ ಸ್ವಾಮೀಜಿ, ಅಂಬೇಡ್ಕರ್ ಅವರನ್ನು ಓದಿದವರು ಲೀಡರ್ ಆಗುತ್ತಾರೆ, ಓದದವರು ಡೀಲರ್ ಆಗುತ್ತಾರೆ ಎಂದು ಹೇಳಿದರು. 

ಶಾಸಕ ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್ ಮಾತನಾಡಿ, “ದೇಶದ ಪ್ರತಿಯೊಬ್ಬರಿಗೂ ಬದುಕುವ ಹಕ್ಕು, ಮತದಾನದ ಹಕ್ಕು ಹಾಗೂ ಶಿಕ್ಷಣದ ಹಕ್ಕು ನೀಡಿದ ಮಹಾನ್ ನಾಯಕ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು” ಎಂದರು.

ಅಂಬೇಡ್ಕರ್ ಭವನದಲ್ಲಿ 2.50 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ಹಾಗೂ ಡಿಜಿಟಲ್ ಗ್ರಂಥಾಲಯ ನಿರ್ಮಿಸಲಾಗುತ್ತಿದ್ದು, ಇದರಿಂದ ಸಮಾಜದ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಮಾಜಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಡಾ. ಕೇದಾರಲಿಂಗಯ್ಯ ಹಿರೇಮಠ, ಜಯಂತೋತ್ಸವ ಅಧ್ಯಕ್ಷ ಪುಂಡಲೀಕ ಗಾಯಕ್ವಾಡ, ರಮೇಶ್ ಬಾಬು, ಶೋಭಾ ಬಾಣಿ ಸೇರಿದಂತೆ ಹಲವು ಗಣ್ಯರು, ಮುಖಂಡರು, ಮಹಿಳೆಯರು ಹಾಗೂ ಯುವಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News