ಕಲಬುರಗಿ: ಶಿಕ್ಷಕರು ಉತ್ತಮ ಹಾಗೂ ಪ್ರಬುದ್ಧ ಸಮಾಜ ನಿರ್ಮಾಣ ಮಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ನಾವು ಆಳುವ ಸರ್ಕಾರವಲ್ಲ, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಸರಕಾರ ಎಂದು ಗೃಹ, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲ್ಯಾಣ ಕರ್ನಾಟಕದ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಬ್ಬದ ನಡುವೆಯೂ ಸಮಯ ಮೀಸಲಿಟ್ಟು ಕಾರ್ಯಕ್ರಮಕ್ಕೆ ಆಗಮಿಸಿದ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.

ಶಿಕ್ಷಕರು ಕೇವಲ ಪಠ್ಯ ಬೋಧನೆಗೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಉತ್ತಮ ಮನೋಭಾವನೆ, ಪ್ರಗತಿಪರ ಚಿಂತನೆ ಹಾಗೂ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸುತ್ತಾರೆ. ಶಿಕ್ಷಕರಲ್ಲಿ ಪ್ರಬುದ್ಧತೆ ಇದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಹೀಗಾಗಿ, ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವುದು ಸರಕಾರದ ಆದ್ಯತೆಯಾಗಿದೆ ಎಂದರು.

ಶಿಕ್ಷಕರಿಗೆ 2.34 ಕೋಟಿ ಮೌಲ್ಯದ ಜಾಗ:

ಕಲಬುರಗಿ ಮಹಾನಗರದಲ್ಲಿ ಶಿಕ್ಷಕರ ಸಮುದಾಯದ ಬೇಡಿಕೆಯಂತೆ ಸುಮಾರು 23 ಸಾವಿರ ಚದರ ಅಡಿ ವಿಸ್ತೀರ್ಣದ, 2.34 ಕೋಟಿ ಮೌಲ್ಯದ ಜಾಗವನ್ನು ಸಿಎ ನಿವೇಶನವಾಗಿ ಒದಗಿಸಲಾಗಿದೆ. ಈ ಜಾಗದಲ್ಲಿ ಶಿಕ್ಷಕರ ಸಮುದಾಯಕ್ಕೆ ಅನುಕೂಲವಾಗುವ ರೀತಿಯಲ್ಲಿ ಅಗತ್ಯ ಸೌಲಭ್ಯಗಳನ್ನು ರೂಪಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ತರಹ ಬಿಜೆಪಿಗರು ಮಾಡಿದ್ದಾರಾ? ಎಂದು ಪ್ರಶ್ನಿಸಿದರು.

ಸರ್ಕಾರದ ಆಸ್ತಿಗಳು ಸಾರ್ವಜನಿಕರ ಆಸ್ತಿಯಾಗಿದ್ದು, ಅಧಿಕಾರದಲ್ಲಿರುವ ವ್ಯಕ್ತಿಗಳು ಬದಲಾಗಬಹುದು. ಆದರೆ, ಸಾರ್ವಜನಿಕ ಆಸ್ತಿಯನ್ನು ಸಮುದಾಯಗಳ ಅಭಿವೃದ್ಧಿಗೆ ಬಳಸುವುದು ಮುಖ್ಯ. ಶಿಕ್ಷಕರ ಆಶೀರ್ವಾದ ಮತ್ತು ಬೆಂಬಲವಿದ್ದರೆ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಚಿವರು ಭರವಸೆ ನೀಡಿದರು.

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ ಶಿಕ್ಷಕರ ಭವಿಷ್ಯದ ದೃಷ್ಟಿಯಿಂದ ಮಹತ್ವದ್ದಾಗಿದೆ. ಮುಂದಿನ ಆರು ವರ್ಷಗಳ ಕಾಲ ಈ ಭಾಗದ ಜಿಲ್ಲೆಗಳ ಶಿಕ್ಷಕರ ಧ್ವನಿಯಾಗಿ ವಿಧಾನ ಪರಿಷತ್ತಿನಲ್ಲಿ ಯಾರು ಇರಬೇಕು ಎಂಬುದನ್ನು ಶಿಕ್ಷಕರೇ ನಿರ್ಧರಿಸಬೇಕು. ಆದ್ದರಿಂದ ಶಿಕ್ಷಕರ ಸಮಯೆಗಳನ್ನು ಆಲಿಸಲು ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಪ್ರತಿಸ್ಪರ್ಧಿ ಅಭ್ಯರ್ಥಿ ಶಶೀಲ್ ನಮೋಶಿ ಅವರ ಕಾರ್ಯವೈಖರಿಯನ್ನು ಟೀಕಿಸಿದ ಪ್ರಿಯಾಂಕ್ ಖರ್ಗೆ, ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗುವಲ್ಲಿ ಅವರು ಎಷ್ಟರ ಮಟ್ಟಿಗೆ ಕೆಲಸ ಮಾಡಿದ್ದಾರೆ ಎಂಬುದನ್ನು ಶಿಕ್ಷಕರು ಪರಿಶೀಲಿಸಬೇಕು. ಸರ್ಕಾರದ ಉತ್ತರಗಳನ್ನು ಪತ್ರಿಕಾ ಪ್ರಕಟಣೆಗಳ ಮೂಲಕ ನೀಡುವುದಷ್ಟೇ ಶಿಕ್ಷಕರ ಪ್ರತಿನಿಧಿಯ ಕೆಲಸವಾಗಬಾರದು. ಶಿಕ್ಷಕರ ಸಮಸ್ಯೆಗಳ ಕುರಿತು ಸದನದಲ್ಲಿ ಧ್ವನಿ ಎತ್ತುವುದು, ನ್ಯಾಯಾಲಯಗಳಲ್ಲಿ ಹೊರಬರುವ ತೀರ್ಪುಗಳ ಬಗ್ಗೆ ಗಮನ ಹರಿಸುವುದು ಹಾಗೂ ಶಿಕ್ಷಕರ ಹಕ್ಕುಗಳಿಗಾಗಿ ಹೋರಾಡುವುದು ಮುಖ್ಯ. ಆದರೆ ಇದ್ಯಾವುದೂ ನಮೋಶಿ ಅವರು ಮಾಡಿಲ್ಲ ಎಂದು ಆರೋಪಿಸಿದರು.

ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸಂಬಂಧಿಸಿದಂತೆ ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕ ತೊಡಕುಗಳಿದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಅವರ ಮನವಿ ಸ್ವೀಕರಿಸಿ, ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿಯೂ ಒಪಿಎಸ್ ಜಾರಿಗೆ ಅಗತ್ಯ ಪ್ರಯತ್ನಗಳನ್ನು ಮುಂದುವರಿಸಲಾಗುವುದು ಎಂದರು.

ಶಿಕ್ಷಕರ ಬಡ್ತಿಯಲ್ಲಿ ಉಂಟಾಗಿರುವ ಅನ್ಯಾಯದ ಕುರಿತು ಸರ್ಕಾರ ಗಮನಹರಿಸಿದ್ದು, ಸದ್ಯ ಈ ವಿಚಾರ ನ್ಯಾಯಾಲಯದಲ್ಲಿದೆ. ಕಾನೂನು ಪ್ರಕ್ರಿಯೆಗಳನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರಿಗೆ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371(ಜೆ) ಕೊಡುಗೆ:

ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸಂವಿಧಾನ ತಿದ್ದುಪಡಿಯ ಮೂಲಕ ಜಾರಿಗೆ ಬಂದಿರುವ 371(ಜೆ) ಕಲಂ ಈ ಭಾಗದ ಜನರಿಗೆ ಮಹತ್ವದ ಅವಕಾಶಗಳನ್ನು ಕಲ್ಪಿಸಿದೆ. ಶಿಕ್ಷಣ, ಉದ್ಯೋಗ ಹಾಗೂ ವೈದ್ಯಕೀಯ ಕ್ಷೇತ್ರಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಅವಕಾಶಗಳು ದೊರೆಯುವಂತಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಜಿಮ್ಸ್ ಆಸ್ಪತ್ರೆ, ಜಯದೇವ ಆಸ್ಪತ್ರೆ ಹಾಗೂ ಇಎಸ್‌ಐ ಆಸ್ಪತ್ರೆ ಸೇರಿದಂತೆ ಹಲವು ಆರೋಗ್ಯ ಸೌಲಭ್ಯಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಚಿತ್ತಾಪುರ ಕ್ಷೇತ್ರದಲ್ಲಿಯೂ ಸುಮಾರು 18 ಕೋಟಿ ವೆಚ್ಚದಲ್ಲಿ ವಿವಿಧ ಶಾಲಾ ಕಟ್ಟಡಗಳ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾತನಾಡಿ, ಶಿಕ್ಷಕರ ಪರವಾಗಿ ಆಗಬೇಕಿರುವ ಕೆಲಸಗಳನ್ನು ಪರಿಣಾಮಕಾರಿಯಾಗಿ ಮಾಡಿದಾಗ ಮಾತ್ರ ನಿಜವಾದ ತೃಪ್ತಿ ದೊರೆಯುತ್ತದೆ. ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರು ಶಿಕ್ಷಕರ ಪ್ರತಿಯೊಂದು ಸಮಸ್ಯೆಗೂ ಸ್ಪಂದಿಸುವ ಗುಣ ಹೊಂದಿದ್ದಾರೆ. ನಮ್ಮ ಸರ್ಕಾರ ಎಲ್ಲ ಸಮುದಾಯಗಳ ಹಿತಾಸಕ್ತಿಯನ್ನು ಕಾಪಾಡಲು ಬದ್ಧವಾಗಿದೆ. ಶಿಕ್ಷಕರು ಶರಣಪ್ಪ ಮಟ್ಟೂರು ಅವರನ್ನು ಬೆಂಬಲಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವ ಡಾ. ಶರಣಪ್ರಕಾಶ ಪಾಟೀಲ, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ್, ಚಂದ್ರಶೇಖರ್ ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕಿರಣ್ ದೇಶಮುಖ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ, ಕುಡಾ ಅಧ್ಯಕ್ಷ ಮಝಾರ ಖಾನ್ ಆಲಂ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor