ವರ್ಷಾಂತ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ : ಸಚಿವ ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ
ಕಲಬುರಗಿ : ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ನಡೆಸಿ ಸಂಪೂರ್ಣ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿ ನಗರದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಗಡಿ ಗುರುತಿಸುವ ಕಾರ್ಯಕ್ಕೆ ಆಕ್ಷೇಪಣೆ ಸಲ್ಲಿಸಲು ಕೊನೆ ದಿನ ಮುಗಿದಿದ್ದು, ಶೀಘ್ರದಲ್ಲೇ ಚುನಾವಣೆ ನಡೆಸಲಾಗುವುದು. ಇದಾದ ನಂತರ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ಸಹ ನಡೆಸಲಾಗುವುದು ಎಂದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಕುಡಿಯುವ ನೀರಿಗೆ ಯಾವುದು ಅನುದಾನ ಕೊರತೆ ಇಲ್ಲ. ನೀರಿನ ಸಮಸ್ಯೆ ಇರುವ 21 ಗ್ರಾಮಗಳಲ್ಲಿ ಹೊಸದಾಗಿ ಬೋರ್ ವೆಲ್ ಕೊರೆಯಲಾಗಿದೆ. 4 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಪ್ರತಿ ಜಿಲ್ಲೆಗೆ 5 ಕೋಟಿ ರೂ. ಅನುದಾನ ಒದಗಿಸಿದೆ. ಇದು ಖರ್ಚು ಮಾಡಿದರೆ ಹೆಚ್ಚಿನ ಅನುದಾನ ಸಹ ನೀಡಲಾಗುವುದು. ಇನ್ನು ಕೆ.ಕೆ.ಆರ್.ಡಿ.ಬಿ ಮಂಡಳಿಯಿಂದ 17.30 ಕೋಟಿ ರೂ. ಅನುದಾನ ಸಹ ನೀಡಲಾಗಿದೆ. ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದು, ಶಾಸಕರ ನಿರ್ಧರಿಸಿದಂತೆ ಕುಡಿಯುವ ನೀರು ಕಾಮಗಾರಿಗಳು ನಡೆಯಲಿವೆ ಎಂದರು.
ಬೇಸಿಗೆಯಲ್ಲಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ಈಗಾಗಲೇ ಎಂ.ವೈ.ಪಾಟೀಲ, ಬಿ.ಆರ್.ಪಾಟೀಲ ಅವರೊಂದಿಗೆ ಸೇರಿ ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರಿಗೆ ಭೇಟಿಯಾಗಿ ಮಹಾರಾಷ್ಟ್ರದಿಂದ ಭೀಮಾ ನದಿಯಿಂದ ಕುಡಿಯುವ ನೀರು ಬಿಡುಗಡೆಗೆ ಒತ್ತಾಯ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ಹೈಕಮಾಂಡ್ ಸೂಕ್ತ ಸಮಯದಲ್ಲಿ ನಿರ್ಧರಿಸಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಿಕಾ ಪರಮೇಶ್ವರ, ಭೀಮರಾಯನಗುಡಿ ಕಾಡಾ ಅಧ್ಯಕ್ಷ ಬಾಬು ಹೊನ್ನನಾಯಕ್ ಇದ್ದರು.