ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ
ಕಲಬುರಗಿ : ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಸೋಮವಾರ ಮಧ್ಯಾಹ್ನ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ದೊರೆಯುತ್ತಿದ್ದಂತೆಯೇ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ತುರ್ತು ಕಾರ್ಯಾಚರಣೆ ನಡೆಸಿ ನ್ಯಾಯಾಲಯದ ಸಂಪೂರ್ಣ ಆವರಣವನ್ನು ತಪಾಸಣೆಗೊಳಪಡಿಸಿದರು.
ಮಧ್ಯಾಹ್ನ ಸುಮಾರು 12.15ರ ವೇಳೆಗೆ ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ವಿಳಾಸಕ್ಕೆ ಬಂದ ಸಂದೇಶದಲ್ಲಿ ನ್ಯಾಯಾಲಯದ ಸಂಕೀರ್ಣದಲ್ಲಿ ನಾಲ್ಕು ಆರ್‌ಡಿಎಕ್ಸ್ ಐಇಡಿ (RDX IED) ಬಾಂಬ್‌ಗಳನ್ನು ಇರಿಸಲಾಗಿದ್ದು, ಮಧ್ಯಾಹ್ನ 2 ಗಂಟೆಗೆ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿತ್ತು. ಜೊತೆಗೆ, ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಬಿಡುಗಡೆ ಮಾಡಬೇಕು ಎಂಬ ಬೇಡಿಕೆಯನ್ನೂ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು.
ಮಾಹಿತಿ ತಿಳಿಯುತ್ತಿದ್ದಂತೆಯೇ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಡಿಸಿಪಿಗಳಾದ ಶಾಲೂ ಹಾಗೂ ಪ್ರವೀಣ್ ನಾಯ್ಕ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಾಂಬ್ ಪತ್ತೆ ದಳ ಮತ್ತು ಶ್ವಾನದಳದ ಸಹಾಯದಿಂದ ನ್ಯಾಯಾಲಯದ ಮುಖ್ಯ ಕಟ್ಟಡ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸೇರಿದಂತೆ ಸಂಪೂರ್ಣ ಸಂಕೀರ್ಣವನ್ನು ಒಂದು ಗಂಟೆಗೂ ಹೆಚ್ಚು ಕಾಲ ಸೂಕ್ಷ್ಮವಾಗಿ ಪರಿಶೀಲಿಸಲಾಯಿತು.
ತಪಾಸಣೆಯ ವೇಳೆ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಸ್ಫೋಟಕ ಪತ್ತೆಯಾಗದ ಹಿನ್ನೆಲೆಯಲ್ಲಿ ಬೆದರಿಕೆ ಸಂದೇಶ ಸುಳ್ಳು ಎಂಬುದು ದೃಢಪಟ್ಟಿದೆ.
ಮುಖ್ಯಮಂತ್ರಿಯವರ ಕಾರ್ಯಕ್ರಮ ಮಂಗಳವಾರ ಕಲಬುರಗಿಯಲ್ಲಿ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಈ ಬೆದರಿಕೆ ಸಂದೇಶವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಇ-ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆ ಹಾಗೂ ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.
ಇ-ಮೇಲ್ ಮೂಲಕ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದ ತಕ್ಷಣವೇ ಸಂಪೂರ್ಣ ಪರಿಶೀಲನೆ ನಡೆಸಲಾಗಿದೆ. ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಹೀಗಾಗಿ ಇದು ಸುಳ್ಳು ಬೆದರಿಕೆ ಎಂಬುದು ದೃಢಪಟ್ಟಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
– ಡಾ.ಶರಣಪ್ಪ ಎಸ್.ಡಿ., ನಗರ ಪೊಲೀಸ್ ಆಯುಕ್ತ