ಜೇವರ್ಗಿ : ಸ್ಮಶಾನ ಭೂಮಿ ಸೇರಿದಂತೆ ಗ್ರಾಮದ ವಿವಿಧ ಮೂಲಸೌಕರ್ಯ ಹಾಗೂ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕೋಳಕೂರು ಗ್ರಾಮ ಘಟಕದ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಎದುರು ನ.28ರಿಂದ ಹಗಲು-ರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ. ಎರಡನೇ ದಿನವೂ ಮಹಿಳೆಯರು ಮತ್ತು ಪುರುಷರು ಧರಣಿಯಲ್ಲಿ ಪಾಲ್ಗೊಂಡು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಗ್ರಾಮದಲ್ಲಿ ಸ್ಮಶಾನ ಭೂಮಿ ಇಲ್ಲದಿರುವುದರಿಂದ ಭೂಹೀನ ಬಡ ಕುಟುಂಬಗಳು ಮೃತರ ಅಂತ್ಯಕ್ರಿಯೆ ನೆರವೇರಿಸಲು ತೀವ್ರ ತೊಂದರೆ ಅನುಭವಿಸುತ್ತಿವೆ. ಹಲವು ವರ್ಷಗಳಿಂದ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಸರ್ಕಾರ ಮತ್ತು ಜನಪ್ರತಿನಿಧಿಗಳು ಕೂಡಲೇ ಮಧ್ಯಪ್ರವೇಶಿಸಿ ಸ್ಮಶಾನಕ್ಕೆ ಸೂಕ್ತ ಜಾಗ ಮಂಜೂರು ಮಾಡಬೇಕು ಎಂದು ಬಸವರಾಜ ನಡುವಿನಕೇರಿ ಆಗ್ರಹಿಸಿದರು.

ಈ ವರ್ಷ ಮಳೆ ಕೊರತೆಯಿಂದ ಮುಂಗಾರು ಮತ್ತು ಹಿಂಗಾರು ಬೆಳೆಗಳು ಹಾನಿಗೀಡಾಗಿದ್ದು, ರೈತರು ಬಿತ್ತನೆ ಬೀಜ, ಗೊಬ್ಬರ ಹಾಗೂ ಕೀಟನಾಶಕಗಳಿಗಾಗಿ ಮಾಡಿದ ಖರ್ಚು ಮರಳಿ ಬಾರದ ಸ್ಥಿತಿ ನಿರ್ಮಾಣವಾಗಿದೆ. ರೈತರು ಸಾಲದ ಸುಳಿಗೆ ಸಿಲುಕಿದ್ದು, ಪ್ರತಿ ರೈತರಿಗೆ ₹50 ಸಾವಿರ ಪರಿಹಾರ ನೀಡಬೇಕು. ಬೆಳೆ ವಿಮೆ ಪಾವತಿಸಿದ ರೈತರಿಗೆ ವಿಮಾ ಪರಿಹಾರವನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಬರಗಾಲದಿಂದ ಕೃಷಿ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ಬರಗಾಲದ ಪರಿಹಾರ ಕಾಮಗಾರಿಗಳನ್ನು ಆರಂಭಿಸಿ, ಜೋಳ, ಅಕ್ಕಿ, ಗೋಧಿ ಸೇರಿದಂತೆ ಅಗತ್ಯ ದವಸಧಾನ್ಯಗಳನ್ನು ವಿತರಿಸಬೇಕು. ದನ, ಕರು, ಕುರಿ, ಮೇಕೆಗಳಿಗೆ ಮೇವು ಒದಗಿಸಲು ಗೋಶಾಲೆಗಳನ್ನು ತೆರೆಯಬೇಕು ಎಂದು ಆಗ್ರಹಿಸಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿದಿನ ಕೆಲಸ ಒದಗಿಸಬೇಕು. ಬರಗಾಲದ ಹಿನ್ನೆಲೆಯಲ್ಲಿ ವಾರ್ಷಿಕ ಉದ್ಯೋಗದ ದಿನಗಳನ್ನು 125ರಿಂದ 250ಕ್ಕೆ ಹೆಚ್ಚಿಸಬೇಕು ಹಾಗೂ ದಿನಗೂಲಿಯನ್ನು ₹700ಕ್ಕೆ ಏರಿಸಬೇಕು. ಬಡ ರೈತರ ಬ್ಯಾಂಕ್ ಸಾಲವನ್ನು ₹5 ಲಕ್ಷದವರೆಗೆ ಮನ್ನಾ ಮಾಡಿ, ಹೊಸ ಕೃಷಿ ಸಾಲವಾಗಿ ಪ್ರತಿ ಎಕರೆಗೆ ₹1 ಲಕ್ಷ ನೀಡಬೇಕು ಎಂದು ಒತ್ತಾಯಿಸಿದರು.

ಇದಲ್ಲದೆ, ಗ್ರಾಮದ ನೀರಿನ ಸಮಸ್ಯೆ ಪರಿಹರಿಸಬೇಕು. ಸಾಮೂಹಿಕ ಶೌಚಾಲಯ ನಿರ್ಮಿಸಬೇಕು. ಈ ಎಲ್ಲ ಸಮಸ್ಯೆಗಳ ಬಗ್ಗೆ ತಹಶೀಲ್ದಾರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಧರಣಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಸುಭಾಷ್ ಹೊಸಮನಿ, ಮಲ್ಕಪ್ಪ ಹರನೂರ, ಕೋಳಕೂರು ಗ್ರಾಮದ ಮುಖಂಡರಾದ ನಿಂಗಣ್ಣ ಆಡಿನ್, ಸಿದ್ದಣ್ಣ ಹಂಗರಗಿ, ಲಕ್ಷ್ಮಣ ಪರಸ್‌ಗೊಂಡ, ಸಿದ್ದಮ್ಮ ಕಟ್ಟೆ, ಶರಣಮ್ಮ ಸಂಗಾವಿ, ತಿಪ್ಪಮ್ಮ ನೆರಡಗಿ, ದೇವಕಿ ಮಾವನೂರು ಸೇರಿದಂತೆ ನೂರಾರು ಮಹಿಳೆಯರು ಮತ್ತು ಪುರುಷರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ