ಜೇವರ್ಗಿ | ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಆರ್ಥಿಕ ಸಬಲೀಕರಣ : ಚಂದ್ರಿಕಾ ಪರಮೇಶ್ವರ
ಜೇವರ್ಗಿ: ರಾಜ್ಯದಲ್ಲಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದ್ದು, ಗ್ಯಾರಂಟಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ದಿಟ್ಟ ಹೆಜ್ಜೆಯಾಗಿವೆ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಹೇಳಿದರು.
ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನ ಅಂಗವಾಗಿ ನಡೆದ ಕಾರ್ಯಕ್ರಮ ಹಾಗೂ ಗ್ಯಾರಂಟಿ ಯೋಜನೆಗಳ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಬಡವರ ಪರ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ಯಾರಂಟಿ ತಾಲ್ಲೂಕು ಸಮಿತಿ ಅಧ್ಯಕ್ಷ ಶೌಕತ್ ಅಲಿ ಆಲೂರ್ ಮಾತನಾಡಿ, ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಾಗದೆ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸುತ್ತಿದ್ದಾರೆ ಎಂದರು.
ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಧರ್ಮ ಸಿಂಗ್ ಅವರ ಆಶಯದಂತೆ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪುವಂತೆ 14 ಸದಸ್ಯರ ಸಮಿತಿ ರಚಿಸಲಾಗಿದ್ದು, ಈ ಸಮಿತಿ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ಮಾಹಿತಿ ನೀಡಿದರು.
ಅನ್ನಭಾಗ್ಯ ಯೋಜನೆಯನ್ನು ಟೀಕಿಸುವವರ ವಿರುದ್ಧ ಪ್ರತಿಕ್ರಿಯಿಸಿದ ಅವರು, ಶ್ರೀಮಂತ ಉದ್ಯಮಿಗಳಿಗೆ ನೀಡುವ ರಿಯಾಯಿತಿಗಳ ಬಗ್ಗೆ ಏಕೆ ಪ್ರಶ್ನೆ ಕೇಳುವುದಿಲ್ಲ ಎಂದು ಪ್ರಶ್ನಿಸಿದರು.
ಕಾರ್ಯಕ್ರಮದ ವೇಳೆ ಶಿಷ್ಟಾಚಾರ ಪಾಲಿಸದ ಹಾಗೂ ಸರಿಯಾದ ನಿರ್ವಹಣೆ ಮಾಡದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ವಿರುದ್ಧ ಶೌಕತ್ ಅಲಿ ಆಲೂರ್ ಅಸಮಾಧಾನ ವ್ಯಕ್ತಪಡಿಸಿದರು. ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳು ಗೈರಾಗಿದ್ದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಮಾರ್ಚ್ 16ರಂದು ನಡೆಯಲಿರುವ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ಈ ಕುರಿತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು.
ವೇದಿಕೆಯಲ್ಲಿ ಜಿಲ್ಲಾ ಉಪಾಧ್ಯಕ್ಷೆ ನಿರ್ಮಲಾ ಬರಗಾಲಿ, ಇಒ ರವಿಚಂದ್ರ ರೆಡ್ಡಿ, ಸಮಿತಿ ಸದಸ್ಯರಾದ ಅಂಜುಭಾಯಿ ರಾಠೋಡ್, ರಾಜು ಗುತ್ತೇದಾರ್, ರುಕುಮ್ ತೋಲಾ ಭಾಗವಾನ್, ನಾಗರಾಜ್ ವಿ.ಟಿ., ಬಸವರಾಜ್ ದೇವದುರ್ಗ ಆಂದೋಲಾ ಉಪಸ್ಥಿತರಿದ್ದರು.
ಆಹಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಯುವನಿಧಿ, ಕೆಕೆಆರ್‌ಟಿಸಿ ಹಾಗೂ ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.